ಬೆಂಗಳೂರು : ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ ‘ಯೋಗ ಸಂಗಮ’ ವಿಶೇಷ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ರಾಜ್ಯಾದಾದ್ಯಂತ 5 ಲಕ್ಷ ಜನರು ಯೋಗಭ್ಯಾಸ ನಡೆಸಲು ರಾಜ್ಯ ಸರ್ಕಾರ ಅನುವು ಮಾಡಿಕೊಡುತ್ತಿದೆ ಎಂದರು.

‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನ ಆಚರಿಸಲಾಗುವುದು. ಜೂನ್ 21 ರ ಮುಂಜಾನೆ 6 ಗಂಟೆಯಿಂದ 8 ಗಂಟೆಯವರೆಗೆ 5000 ಜನರು ವಿಧಾನ ಸೌಧದ ಮೆಟ್ಟಿಲುಗಳ ಎದುರು ಯೋಗಾಭ್ಯಾಸ ನಡೆಸಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಶಾಸಕರು, ಸಂಸದರು, ಕ್ರೀಡಾಪಟುಗಳು, ತಾರೆಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಮೈಸೂರನ್ನು ‘ಯೋಗ ಜಿಲ್ಲೆಯನ್ನಾಗಿ’ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಮೈಸೂರು ಜಿಲ್ಲೆಯ ಪ್ರತಿಯೊಂದ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವಂತಾಗಬೇಕು ಎಂಬ ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಕೈ ಹಾಕಿದ್ದು, ಈ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.