ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ- ಸಿಎಂ ಸಿದ್ದರಾಮಯ್ಯ

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಮುಖ್ಯಮಂತ್ರಿ, ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ, ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಮಂಡ್ಯದಲ್ಲಿ 48ನೇ ಸಾಹಿತ್ಯ ಸಮ್ಮೇಳನವನ್ನು 1974ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63ನೇ ಸಾಹಿತ್ಯ ಸಮ್ಮೇಳನವನ್ನು 1994ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ 3ನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು

Leave a Reply

Your email address will not be published. Required fields are marked *