ಬೆಂಗಳೂರು: 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ ಜುಲೈ 26 ರವರೆಗೆ ನಡೆಯಲಿದೆ. ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ಜುಲೈ 15 ರಂದು ಅಧಿವೇಶನ ಆರಂಭದ ದಿನ. ಇಲ್ಲಿಯವರಗೆ ನಿಧನ ಹೊಂದಿರುವ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಲಾಗುವುದು ಎಂದರು.
ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. ಈ ಅಧಿವೇಶನದಲ್ಲಿ ಒಟ್ಟು 9 ದಿನಗಳ ಕಾಲ ಪ್ರಶ್ನೋತ್ತರ ಕಲಾಪವನ್ನು ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನ ಸೆಳೆಯುವ ಸೂಚನೆ, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ವಿಧಾನಸೌಧದ ಯಾವ ಕೊಠಡಿಯಲ್ಲಿ ಯಾವ ಸಚಿವರು ಇದ್ದಾರೆ. ಕೊಠಡಿ ಸಂಖ್ಯೆ, ಇಲಾಖೆ ಹೆಸರು ಸೇರಿದಂತೆ ವಿಧಾನಸೌಧದ ಸಂಪೂರ್ಣ ಮಾಹಿತಿಯುಳ್ಳ ಆ್ಯಪ್ ಸಿದ್ಧಪಡಿಸಲು ಚಿಂತನೆ ನಡೆದಿದೆ. ಮುಂದಿನ ದಿನಗಳಲ್ಲಿ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಸ್ಪೀಕರ್ ತಿಳಿಸಿದರು.