ಭಾರಿ ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ

ಬೆಂಗಳೂರು: ಕಳೆದ 2 ವರ್ಷಗಳಿಂದ ಭಾರೀ ವಾಹನಗಳಿಗೆ ನಿಷೇಧವಿದ್ದ ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ ಸೋಮವಾರದಿಂದ ಎಲ್ಲಾ ವಾಹನ ಸಂಚಾರಕ್ಕೆ ಮುಕ್ತವಾಗಿದೆ.

ರಾಜ್ಯದ ಸುಮಾರು 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಮೇಲ್ಸೇತುವೆಯ ತಾಂತ್ರಿಕ ಸಮಸ್ಯೆಗಳಿಂದ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿತ್ತು. ಇದೀಗ ಲೋಪದೋಷಗಳನ್ನು ಸರಿಪಡಿಸಲಾಗಿದ್ದು, ರಾಜ್ಯ ಹೆದ್ದಾರಿ ಪ್ರಾಧಿಕಾರ ಎಲ್ಲಾ ವಾಹನಗಳ ಸಂಚಾರಕ್ಕೆ ಹಸಿರುನಿಶಾನೆ ತೋರಿಸಿದೆ.

ಕಳೆದ ಎರಡು ವರ್ಷಗಳಿಂದ ಈ ಮಾರ್ಗದಲ್ಲಿ ಚಲಿಸುವ ವಾಹನ ಚಾಲಕರು ಹಾಗೂ ಪ್ರಯಾಣಿಕರು ಸರ್ವೀಸ್‌‍ ರಸ್ತೆಗೆ ಹೋಗಬೇಕಾಗಿತ್ತು. ಹೀಗಾಗಿ ಸಂಚಾರಿ ದಟ್ಟಣೆಯಲ್ಲಿ ಸಿಲುಕಿ ಭಾರೀ ತೊಂದರೆ ಅನುಭವಿಸಿದ್ದರು.

4.2 ಕಿ.ಮೀ ಉದ್ದದ ಮೇಲ್ಸೇತುವೆಯಲ್ಲಿ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದರಿಂದ ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಆಗುತ್ತಿತ್ತು. ಫ್ಲೈಓವರ್‌ನಲ್ಲಿ ಪ್ರಿಸ್ಟೈಡ್‌ ಕೇಬಲ್‌ಗಳ ಹಾಳಾದ ಹಿನ್ನಲೆಯಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಇದೀಗ ಹೊಸದಾಗಿ ಕೇಬಲ್‌ಗಳನ್ನು ಅಳವಡಿಸಿದ್ದು, ಎಲ್ಲಾ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.

ಮೇಲ್ಸೇತುವೆಯ ವಿಶೇಷ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರೀ ವಾಹನಗಳ ಓಡಾಟವನ್ನು ನಿಷೇಧಿಸಲಾಗಿದೆ. ಜೊತೆಗೆ ಮೇಲ್ಸೇತುವೆ ಎಡ, ಬಲ ಪಕ್ಕದಲ್ಲಿ ಗರಿಷ್ಠ 40 ಕಿ.ಮೀ ವೇಗದಲ್ಲಿ ಚಲಿಸುವಂತೆ ಹೆದ್ದಾರಿ ಅಧಿಕಾರಿಗಳು ಸೂಚಿಸಿದ್ದು, ಒಂದು ವೇಳೆ ನಿಯಮ ಮೀರಿದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *