ಬೆಂಗಳೂರು: ಕರ್ನಾಟಕ ಸರ್ಕಾರ ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳುವುದರ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ. ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಸರ್ಕಾರ ಈಗಾಗಲೇ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನವನ್ನು ರಾಜ್ಯಾದ್ಯಂತ ನಡೆಸುತ್ತಿದ್ದು, ಹಲವು ಕಾರ್ಯಕ್ರಮಗಳನ್ನು ಈ ಅಭಿಯಾನದ ಭಾಗವಾಗಿ ಆಯೋಜಿಸಲಾಗುತ್ತಿದೆ.
ಸಂದೀಪ್ ಬಿ. ಕೆ., ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ರಾಜಕೀಯ) ಈ ಕುರಿತು ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು, ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸುತ್ತೋಲೆಯ ಮೂಲಕ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.
ಸುತ್ತೋಲೆಯ ವಿವರಗಳು: ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ತಿಳಿಸಿದೆ.
ನೂತನ ಕೊರಳುದಾರದ ವಿನ್ಯಾಸವನ್ನು https://photos.app.goo.gl/YcJeNHnDNPecW8Q48?utm_source=DH-MoreFromPub&utm_medium=DH-app&utm_campaign=DHಆನ್ಲೈನ್ ವಿಳಾಸದಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸುತ್ತೋಲೆಯೂ ಹೇಳಿದೆ.