ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್: ಅ.1ರಿಂದಲೇ ನಿಯಮ ಜಾರಿ

ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್: ಅ.1ರಿಂದಲೇ ನಿಯಮ ಜಾರಿ

ಹುಬ್ಬಳ್ಳಿ: ವಿದ್ಯುತ್ ಬಿಲ್ ನೀಡಿದ ನಂತರದ 30 ದಿನಗಳೊಳಗೆ ಬಿಲ್ ಪಾವತಿಸದಿದ್ದಲ್ಲಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ಅಕ್ಟೋಬರ್ 1ರಿಂದಲೇ ಈ ನಿಯಮ ಕಟ್ಟುನಿಟ್ಟಾಗಿ ಜಾರಿಯಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್ಮೆಂಟ್ಗಳು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸಬೇಕು. ಇಲ್ಲದಿದ್ದಲ್ಲಿ ಮೀಟರ್ ರೀಡಿಂಗ್ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್ ಓದಿದ ಬಳಿಕ, ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲು ಲೈನ್ಮೆನ್ಗಳ ಜತೆ ಮಾಪಕ ಓದುಗರು ತೆರಳುತ್ತಿದ್ದರು. ಇನ್ನುಮುಂದೆ ಮಾಪಕ ಓದುಗರೊಂದಿಗೆ ಲೈನ್ಮೆನ್ಗಳು ತೆರಳಲಿದ್ದಾರೆ. ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬಿಲ್ ನೀಡುವ ಸಮಯದಲ್ಲಿಯೇ ವಿದ್ಯುತ್ ಸಂಪರ್ಕವನ್ನೂ ಸ್ಥಗಿತಗೊಳಿಸಲಿದ್ದಾರೆ. ವಿದ್ಯುತ್ ಬಿಲ್ ಪಾವತಿಗೆ ಯಾವುದೇ ಬಡ್ಡಿಯಿಲ್ಲದೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಆ ನಂತರವೂ ಬಡ್ಡಿ ಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ಇರುತ್ತದೆ. ಆದರೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ತಿಳಿಸಿದೆ.

ವಿದ್ಯುತ್ ಬಾಕಿ ಮೊತ್ತ ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಸಹ ಕಡಿತಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *