ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಉಖ್ರುಲ್ ಪಟ್ಟಣದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಒಂದು ಗುಂಪು ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳನ್ನು ದೋಚಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಸ್ವಚ್ಛತಾ ಅಭಿಯಾನ’ದ ಅಂಗವಾಗಿ ಪಟ್ಟಣದ ವಿವಾದಿತ ಜಮೀನನ್ನು ಸ್ವಚ್ಛಗೊಳಿಸುವ ವಿಚಾರವಾಗಿ ಬುಧವಾರ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ನಾಗಾ ಸಮುದಾಯದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುತ್ತಿರುವಾಗಲೇ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಲಾಗಿದೆ. ಘರ್ಷಣೆಯ ನಂತರ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
“ಉಖ್ರುಲ್ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ, ಬಹುಪಾಲು ಯುವಕರನ್ನು ಒಳಗೊಂಡ ಗುಂಪು ವಿನೋ ಬಜಾರ್ನಲ್ಲಿರುವ ಪೊಲೀಸ್ ಠಾಣೆಗೆ ನುಗ್ಗಿ, ಶಸ್ತ್ರಾಸ್ತ್ರಗಳನ್ನು ದೋಚಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿರುವುದರಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳ ಸಂಖ್ಯೆ ಮತ್ತು ಅದರ ಪ್ರಕಾರಗಳನ್ನು ತಕ್ಷಣವೇ ದೃಢೀಕರಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.