ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಸೋಮವಾರ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ಬಂಧ ಹೇರಿದೆ.
ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದ್ದು ಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧ ಹೇರಿದೆ.
ಮಾರ್ಚ್ 22 ರಂದು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು.
“ವಿದ್ಯಾರ್ಥಿಗಳಿಗೆ ಯಾಕೆ ಕಿರುಕುಳ ನೀಡುತ್ತಿದ್ದೀರಿ?, ನೀವು ಈ ರೀತಿ ವರ್ತಿಸಬಾರದು, ಇದನ್ನು ಅಹಂಕಾರದ ಸಮಸ್ಯೆ ಮಾಡಿಕೊಳ್ಳಬೇಡಿ, ನಿಮಗೆ ನಿಜವಾಗಿಯೂ ವಿದ್ಯಾರ್ಥಿಗಳ ಹಿತದ ಬಗ್ಗೆ ಕಾಳಜಿ ಇದ್ದರೆ ದಯವಿಟ್ಟು ಒಳ್ಳೆಯ ಶಾಲೆಗಳನ್ನು ತೆರೆಯಿರಿ.
ವಿದ್ಯಾರ್ಥಿಗಳ ಕತ್ತು ಹಿಸುಕುವ ಕೆಲಸ ಮಾಡಬೇಡಿ. ಕರ್ನಾಟಕ ಸರ್ಕಾರ ಅನುಸರಿಸುತ್ತಿರುವ ಶಿಕ್ಷಣದ ಮಾದರಿಯನ್ನು ಬೇರೆ ಯಾವುದೇ ರಾಜ್ಯಗಳು ಅನುಸರಿಸುತ್ತಿಲ್ಲ ಎಂದು ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್ ಅವರಿಗೆ ಪೀಠ ಹೇಳಿದೆ.
ರಾಜ್ಯದ ಏಳು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 5, 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇತರ 24 ಜಿಲ್ಲೆಗಳಲ್ಲಿಯೂ ಪರೀಕ್ಷೆ ನಡೆಸಲಾಗಿದೆ ಎಂದು ಇದೇ ವೇಳೆ ವಕೀಲ ಕಾಮತ್ ಹೇಳಿದರು.
ಇನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳಲ್ಲಿ ಪರೀಕ್ಷೆಯ ನಿಖರವಾದ ವಿವರಗಳನ್ನು ನೀಡುವ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರವನ್ನು ಕೇಳಿದೆ.
ಅಂದಹಾಗೆ ಈ ಕುರಿತ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಯಾವುದೇ ಜಿಲ್ಲೆಯಲ್ಲಿ ಪರೀಕ್ಷೆಯನ್ನು ನಡೆಸದಿದ್ದರೆ ಅದನ್ನು ಫಲಿತಾಂಶಕ್ಕೆ ತೆಗೆದುಕೊಳ್ಳಬಾರದು ಎಂದು ನಿರ್ದೇಶಿಸಿದೆ.