ಬೆಂಗಳೂರು: ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಶಾಲಾ-ಕಾಲೇಜಿಗೆ ರಜೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು(ಡಿ.2) ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಮೈಸೂರು ಶಾಲೆ-ಕಾಲೇಜು ರಜೆ
ಫೆಂಗಲ್ ಚಂಡಮಾರುತ ಹಿನ್ನೆಲೆ ಮೈಸೂರು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಭಾನುವಾರ ಸಂಜೆ ಶುರುವಾದ ಮಳೆ ಇಡೀ ರಾತ್ರಿ ಸುರಿದಿದೆ. ಹೀಗಾಗಿ ಮೈಸೂರು ಜಿಲ್ಲೆಯ ಪಿಯು ಕಾಲೇಜು ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಮಳೆ ಜತೆ ವಿಪರೀತ ಚಳಿಯೂ ಇದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಮುಂಜಾಗೃತೆಯಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಚಾಮರಾಜನಗರದಲ್ಲೂ ಶಾಲಾ ಕಾಲೇಜುಗಳಿಗೆ ರಜೆ
ಫೆಂಗಲ್ ಚಂಡಮಾರುತದ ಹಿನ್ನೆಲೆ ನಿರಂತರ ಮಳೆಯಿಂದಾಗಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತು ಪಡಿಸಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ. ಇಂದಿನ ರಜೆ ಅವಧಿಯನ್ನು ಭಾನುವಾರ ತರಗತಿ ನಡೆಸಿ ಸರಿದೂಗಿಸಲಾಗುವುದೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.
ಯಾವ್ಯಾವ ಜಿಲ್ಲೆಗಳಿಗೆ ಹೆಚ್ಚು ಮಳೆ
ಚಂಡಮಾರುತದ ಹಿನ್ನೆಲೆಯಲ್ಲಿ ಡಿ. 2 ಮತ್ತು 3 ರಂದು 35 ರಿಂದ 85 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಯೆಲ್ಲೋ ಅಲರ್ಟ್
”ಡಿ. 3 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಡಿ.4 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ,” ಎಂದು ತಿಳಿಸಿದ್ದಾರೆ.