ಬೆಂಗಳೂರು/ತುಮಕೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರ ಪರಿಣಾಮವಾಗಿ ಇಂದು ಮತ್ತು ನಾಳೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ಚಿತ್ರದುರ್ಗ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುರುವಾರ `ಯಲ್ಲೋ ಅಲರ್ಟ್’ ನೀಡಲಾಗಿದೆ. ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.
ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಇಲಾಖೆಯು ಶುಕ್ರವಾರವೂ ಯಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ವಿವಿಧೆಡೆ ಶನಿವಾರವೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.