ಮಧುಗಿರಿ : ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಡಿವೈಎಸ್ಪಿ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಈ ಕೃತ್ಯ ನಡೆದಿದೆ. ಮಧುಗಿರಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿನಿಧಿಸುವ ಕ್ಷೇತ್ರ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಅವರ ಜಿಲ್ಲಾ ವ್ಯಕ್ತಿಯಲ್ಲಿದೆ. ಇಬ್ಬರು ಸಚಿವರಿರುವ ಅದರಲ್ಲೂ ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಇಂತಹ ಘಟನೆ ನಡೆದಿದ್ದು, ಸರ್ಕಾರದ ವಿರುದ್ಧವೂ ಅಸಮಾಧಾನ ವ್ಯಕ್ತವಾಗುತ್ತಿದೆ.
ಪಾವಗಡ ತಾಲೂಕಿನ ಮಹಿಳೆ ಜಮೀನು ವ್ಯಾಜ್ಯದ ವಿಚಾರವಾಗಿ ದೂರು ನೀಡಲು ಮಧುಗಿರಿ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಈ ವೇಳೆ, ಮಹಿಳೆಯನ್ನು ಯಾರು ಇಲ್ಲದ ಕೊಠಡಿಗೆ ಕರೆದಯ್ದು ಡಿವೈಎಸ್ಪಿ ರಾಮಚಂದ್ರಪ್ಪ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್ಪಿ ರಾಮಚಂದ್ರಪ್ಪನ ಕೃತ್ಯವನ್ನು ಮಹಿಳೆಯ ಜೊತೆ ಬಂದಿದ್ದ ಯುವಕ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಅಳಲು ತೋಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.