ಧಾರವಾಡ: 76 ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ಸಂವಿಧಾನವನ್ನು ಪ್ರತಿಯೊಬ್ಬರು ಓದಬೇಕು; ಸೌಹಾರ್ದತೆ, ಸಹಬಾಳ್ವೆಯ ಪಾಠವನ್ನು ಸಂವಿಧಾನ ಪೀಠಿಕೆಯಿಂದ ಕಲಿಯುತ್ತೇವೆ
ಧಾರವಾಡ, : ಭಾರತದ ಸಂವಿಧಾನವನ್ನು ಪ್ರತಿಯೊಬ್ಬರು ಓದಬೇಕು. ಸಂವಿಧಾನ ಪೀಠಿಕೆಯಲ್ಲಿ ಹೇಳಿರುವ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ದೇಶದ ಅಭಿವೃದ್ಧಿಗೆ ವಿಶೇಷವಾಗಿ ಯುವ ಸಮೂಹ ತೊಡಗಿಸಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಅವರು ಹೇಳಿದರು.
ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೇರವೆರಿಸಿ ಸಾರ್ವಜನಿಕರನ್ನು ಉದ್ದೇಶಿಸಿ, ಮಾತನಾಡಿದರು.
ಭಾರತ ದೇಶವು ಎಲ್ಲ ಧರ್ಮದವರಿಗೂ ಸೇರಿದ್ದು, ಯಾವುದೇ ಪಕ್ಷ, ಧರ್ಮಗಳಿಗೆ ಮೀಸಲಾಗಿಲ್ಲ. ಡಾ. ಬಿ.ಆರ್. ಅಂಬೇಡ್ಕರ ಅವರು ರಚಿಸಿರುವ ಸಂವಿಧಾನವು ಪ್ರತಿಯೊಬ್ಬರ ಸಮಗ್ರ ಅಭಿವೃದ್ಧಿಗೆ ಮತ್ತು ಸಮಾಜದ ಹಿತಕ್ಕೆ ಪೂರಕವಾದ ಅಂಶಗಳನ್ನು ನೀಡಿದೆ. ಪ್ರತಿಯೊಬ್ಬರು ಪ್ರತಿದಿನ ಸಂವಿಧಾನ ಪೀಠಿಕೆಯನ್ನು ಓದುಬೇಕು. ಪಿಠೀಕೆಯಲ್ಲಿ ಇರುವ ಮೌಲ್ಯಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಪ್ರಗತಿ: ಕರ್ನಾಟಕ ಸರ್ಕಾರ ಬಡವರ ಏಳಿಗೆಗಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 3.22 ಲಕ್ಷ ಮಹಿಳೆಯರು ಪ್ರತಿ ದಿನ ಉಚಿತವಾಗಿ ಪ್ರಯಾಣ ಮಾಡಿದ್ದು, ರೂ. 67.33 ಲಕ್ಷ ಮೊತ್ತದ ಸೇವೆಯನ್ನು ಪಡೆದಿದ್ದಾರೆ. ಇಲ್ಲಿಯವರೆಗೆ ರೂ. 383.75 ಕೋಟಿ ಶಕ್ತಿ ಯೋಜನೆಗೆ ವೆಚ್ಚವಾಗಿರುತ್ತದೆ ಎಂದರು.
ಗೃಹಲಕ್ಷ್ಮಿ ಯೋಜನೆಯಲ್ಲಿ 3,87,201 ಮಹಿಳೆಯರಿಗೆ ರೂ. 1,065 ಕೋಟಿ ಗಳನ್ನು ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಲ್ಲಿ 4,94,943 ಬಳಕೆದಾರರಿಗೆ ರೂ. 3,50,324 ಕೋಟಿ ಗಳ ನೆರವನ್ನು ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ 3,5೦,324 ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ಹಾಗೂ ತಲಾ ರೂ.170 ಗಳನ್ನು ನೇರವಾಗಿ ಡಿ.ಬಿ.ಟಿ ಮೂಲಕ ನೀಡಲಾಗಿದೆ. ಇಲ್ಲಿಯವರೆಗೆ ರೂ. 276.64 ಕೋಟಿಗಳ ನೆರವು ನೀಡಲಾಗಿದೆ. ಮತ್ತು ಯುವ ನಿಧಿ ಯೋಜನೆಯಲ್ಲಿ 4,388 ಫಲಾನುಭವಿಗಳಿಗೆ ರೂ.5.77 ಕೋಟಿ ಗಳ ನೆರವನ್ನು ನೀಡಲಾಗಿದೆ ಎಂದು ಸಚಿವ ಸಂತೋಷ ಲಾಡ್ ಅವರು ಹೇಳಿದರು.
ವಿವಿಧ ಯೋಜನೆಗಳಡಿ ಅಭಿವೃದ್ಧಿ: ಗ್ರಾಮೀಣ ಕುಡಿಯುವ ನೀರಿನ ಯೋಜನೆಯಲ್ಲಿ 2,01,116 ಮನೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಸ್ವಚ್ಛ ಭಾರತ ಯೋಜನೆಯಡಿ 2024-25 ನೇ ಸಾಲಿನಲ್ಲಿ 4,548 ವೈಯುಕ್ತಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಜಿಲ್ಲೆಯಲ್ಲಿರುವ 1,33,684 ಅಂಗನವಾಡಿ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. 1,86,760 ಶಾಲಾ ಮಕ್ಕಳಿಗೆ ಪ್ರತಿ ದಿನ ಬಿಸಿಯೂಟ ಹಾಗು ಬಿಸಿ ಹಾಲು ನೀಡಲಾಗುತ್ತಿದೆ. ಜನನಿ ಸುರಕ್ಷಾ ಯೋಜನೆಯಡಿ 16,258 ಗರ್ಭಿಣಿ ಸ್ರ್ತೀಯರಿಗೆ ಹೆರಿಗೆ ಭತ್ಯೆ ವಿತರಿಸಲಾಗಿದೆ ಎಂದು ಸಚಿವರು ಹೇಳಿದರು.
ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳ ಸೌಲಭ್ಯವನ್ನು 8,603 ವಿದ್ಯಾರ್ಥಿಗಳು ಪಡೆದಿದ್ದು, ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿದೆ. ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ರೂ.30,87 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. 8,520 ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳ ಸೌಲಭ್ಯವನ್ನು ಪಡೆದಿದ್ದು, ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿದೆ ಎಂದರು.
ಗಣರಾಜ್ಯೋತ್ಸವ ಭಾರತದ ಒಂದು ರಾಷ್ಟ್ರೀಯ ಹಬ್ಬ. ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ಧತಿಯನ್ನು ಅಳವಡಿಸಿಕೊಂಡ ಸಂಭ್ರಮದ ದಿನವಾಗಿದೆ. ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ಪಿತಾಮಹ ಎನ್ನುತ್ತಾರೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು, ನಮ್ಮ ನಾಯಕರು ಮತ್ತು ನಮ್ಮ ಸಂವಿಧಾನದ ರಚನೆಗೆ ಕೊಡುಗೆ ನೀಡಿದ ಪ್ರತಿಯೊಬ್ಬ ವ್ಯಕ್ತಿಯನ್ನು ನೆನಪಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳೋಣ ಎಂದು ಸಚಿವರು ತಿಳಿಸಿದರು.
ನಾವು ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು. ದೇಶದ ಪ್ರಜೆಗಳಿಗೆ ಮೂಲಭೂತ ಹಕ್ಕುಗಳಿರುವಂತೆ ಮೂಲಭೂತ ಕರ್ತವ್ಯಗಳು ಸಹ ಇರುತ್ತವೆ. ಭಾರತ ದೇಶವನ್ನು ಇನ್ನಷ್ಟು ಅಭಿವೃದ್ಧಿಯತ್ತ ಸಾಗಿಸೋಣ. ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದು ಮಾತ್ರವಲ್ಲದೆ ಸಾಮಾಜಿಕ ಸಾಮರಸ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯಲ್ಲಿ ಬೆಳೆಯುತ್ತಿರುವ ಭಾರತಕ್ಕಾಗಿ ಕೆಲಸ ಮಾಡಲು ನಾವು ಇಂದು ಪ್ರತಿಜ್ಞೆ ಮಾಡೋಣ ಎಂದು ಸಚಿವ ಸಂತೋಷ ಲಾಡ್ ನುಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದಿವಗಂತ ರೋಹಿತ ಕುಂಬಾರ ಇವರ ಅಂಗಾಂಗ ದಾನ ಮಾಡಿದ ಕುಟುಂಬಕ್ಕೆ, ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿಶೇಷ ಸೇವೆ ಸಲ್ಲಿಸಿದ್ದಾಕ್ಕಾಗಿ ಶ್ರೀ ಸಿದ್ಧಾರೋಢ ಟ್ರಸ್ಟ್ಗೆ ಹಾಗೂ ಇಸ್ಕಾನ ಸಂಸ್ಥೆಗಳಿಗೆ ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಸನ್ಮಾನಿಸಿ, ಪ್ರಮಾಣ ಪತ್ರದೊಂದಿಗೆ ಗೌರವಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತರಾದ ರವೀಶ ಸಿ.ಆರ್., ಮತ್ತು ಮಾನಿಂಗ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ.ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮುಖ್ಯ ಯೋಜನಾ ನಿರ್ದೇಶಕ ದೀಪಕ ಮಡಿವಾಳರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ ದೇಸಾಯಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ, ಧಾರವಾಡ ತಹಶೀಲ್ದಾರ ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಗರದ 150 ಕ್ಕೂ ಹೆಚ್ಚು ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.