ಬೆಂಗಳೂರು || ಜಯಲಲಿತಾ ಚಿನ್ನಾಭರಣ ಒಯ್ಯಲು 6 ದೊಡ್ಡ ಪೆಟ್ಟಿಗೆ ತನ್ನಿ: ಕೋರ್ಟ್ ನಿರ್ದೇಶನ

ಬೆಂಗಳೂರು || ಜಯಲಲಿತಾ ಚಿನ್ನಾಭರಣ ಒಯ್ಯಲು 6 ದೊಡ್ಡ ಪೆಟ್ಟಿಗೆ ತನ್ನಿ: ಕೋರ್ಟ್ ನಿರ್ದೇಶನ

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ನಿರ್ಧರಿಸಿತು.

ಅಲ್ಲದೆ, ಛಾಯಾಗ್ರಾಹಕರು, ವಿಡಿಯೋಗ್ರಾಫರ್ ಮತ್ತು ಆರು ದೊಡ್ಡ ಪೆಟ್ಟಿಗೆಗಳ (ಟ್ರಂಕ್) ಜೊತೆಗೆ ಅಗತ್ಯ ಭದ್ರತೆಯೊಂದಿಗೆ ಬಂದು ಆಭರಣಗಳನ್ನು ಪಡೆದುಕೊಳ್ಳಬೇಕು ಎಂದು ತಮಿಳುನಾಡು ಸರ್ಕಾರಕ್ಕೆ ತಿಳಿಸಿದೆ.

ಆರ್ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನಗರದ 36ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು, 2025ರ ಫೆಬ್ರವರಿ 14 ಮತ್ತು 15ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿದರು. ಜಯಲಲಿತಾ ಅವರ ಆಸ್ತಿಗೆ ತಾವೇ ವಾರಸುದಾರರು ಎಂದು ಅವರ ಸಹೋದರನ ಸಂಬಂಧಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಮತ್ತೊಮ್ಮೆ ಈ ಆದೇಶ ಮಾಡಿದೆ.

ಏನೆಲ್ಲಾ ವಸ್ತುಗಳಿವೆ?: 7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜಿರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

ಆದ್ದರಿಂದ ಜಯಲಲಿತಾರ ಒಡವೆಗಳ ಹಸ್ತಾಂತರ ಕುರಿತು ಆರ್ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡುವಂತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

Leave a Reply

Your email address will not be published. Required fields are marked *