ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ನಡೆಸುವ ಬಗ್ಗೆ ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ.
ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ನಗರದಲ್ಲಿ ವಾಹನಗಳ ಟೋಯಿಂಗ್ ನಿಲ್ಲಿಸಲಾಗಿತ್ತು. ಆದರೆ ಇತ್ತೀಚಿಗೆ ಸವಾರರು ವಾಹನಗಳನ್ನು ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ಪಾರ್ಕ್ ಮಾಡುತ್ತಿರುವ ಪ್ರವೃತ್ತಿ ಹೆಚ್ಚಾಗಿದೆ.
ಈ ರೀತಿ ಪಾರ್ಕ್ ಮಾಡುತ್ತಿರುವುದರಿಂದ ಆ ಜಾಗಗಳಲ್ಲಿ ಟ್ರಾಫಿಕ್ ಹೆಚ್ಚಾಗುವುದರ ಜೊತೆಗೆ ಇತರೇ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜನರು ಸಾಮಾಜಿಕ ಜಾಲತಾಣದಲ್ಲಿ ಪೊಲೀಸರಿಗೆ ದೂರು ನೀಡುತ್ತಿದ್ದಾರೆ. ದೂರುಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಮತ್ತೆ ಅಗತ್ಯ ಸ್ಥಳಗಳಲ್ಲಿ ಟೋಯಿಂಗ್ ಮಾಡಲು ಪೊಲೀಸರು ಚಿಂತನೆ ನಡೆಸಿದ್ದಾರೆ.
ಎಲ್ಲೆಲ್ಲಿ ಟೋಯಿಂಗ್?
ಎಂಜಿ ರೋಡ್, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಕಮರ್ಷಿಯಲ್ ಸ್ಟ್ರೀಟ್, ಕೆಆರ್ ಮಾರ್ಕೆಟ್, ಚಿಕ್ಕಪೇಟೆ, ಸೇರಿದಂತೆ 70 ಸಿಬಿಡಿ ಜಂಕ್ಷನ್ಗಳನ್ನು ಗುರುತಿಸಲಾಗಿದೆ. ಈ ಜಂಕ್ಷನ್ಗಳಲ್ಲಿ ಮಾತ್ರ ಟೋಯಿಂಗ್ ಮಾಡಲು ಚಿಂತನೆ ನಡೆಸಲಾಗಿದೆ
ಟೋಯಿಂಗ್ ಜವಾಬ್ದಾರಿಯನ್ನು ಖಾಸಗಿಯವರಿಗೆ ನೀಡಬೇಕೇ? ಅಥವಾ ಪೊಲೀಸ್ ಇಲಾಖೆಯೇ ಮಾಡಬೇಕೇ? ಸೇರಿದಂತೆ ಟೋಯಿಂಗ್ ಮಾಡಲು ಏನೇನು ಮಾನದಂಡ ಹಾಕಬೇಕು ಎಂಬುದರ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ.