ಬೆಂಗಳೂರು : ಕರ್ನಾಟಕ 2025-26ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.7) ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದು, ಅದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಜೀವನದಲ್ಲಿ ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಮಂಡಿ ನೋವು ಕಾಡುತ್ತಿರುವ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ ಕುಳಿತುಕೊಂಡೇ ಬಜೆಟ್ ಭಾಷಣ ಮಾಡುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಅವರು ಈ ಸಲದ ಬಜೆಟ್‌ನಲ್ಲಿ ಅಭಿವೃದ್ಧಿ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳ ನಡುವೆ ಸಮತೋಲನ ಕಂಡುಕೊಳ್ಳಬೇಕಾಗಿರುವುದು ದೊಡ್ಡ ಸವಾಲಾಗಿದೆ. ಒಂದು ಕಡೆ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹ ಜ್ಯೋತಿ ಸೇರಿ ಐದು ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡುವುದು ಹಾಗೂ ಇನ್ನೊಂದೆಡೆ, ಮೂಲಸೌಕರ್ಯ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಸಾಲ ಪಡೆಯುವ ಅನಿವಾರ್ಯ ಕಂಡುಬಂದಿದೆ.
ಕಳೆದ ಬಾರಿ ಸಿಎಂ ಸಿದ್ದರಾಮಯ್ಯ 3.71 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದರು. ಇದೀಗ ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.ಗಳನ್ನು ದಾಟುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ದಾಖಲೆಯ ಸರ್ದಾರ ಸಿದ್ದರಾಮಯ್ಯ ಅವರ ಬಜೆಟ್ ಮೇಲೆ ಈ ಬಾರಿ ಹೆಚ್ಚಿನ ನಿರೀಕ್ಷೇಯಿದೆ. ಸಿಎಂ ಸಿದ್ದರಾಮಯ್ಯ ಈ ಬಾರಿ ಬಜೆಟ್‌ನಲ್ಲಿ ಬಡವರಿಗೆ, ನಿರ್ಗತಿಕರಿಗೆ, ಹಿಂದುಳಿದವರಿಗೆ, ರೈತರಿಗೆ, ಕೈಗಾರಿಕೊದ್ಯಮಕ್ಕೆ ಏನೆಲ್ಲ ನೀಡಲಿದ್ದಾರೆ ಎಂಬುದುರ ಬಗ್ಗೆ ಕುತೂಹಲ ಮೂಡಿದೆ.
ಹಾಗೆಯೇ ಒಳಾಡಳಿತ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ, ಸಣ್ಣ ಕೈಗಾರಿಕಾ, ಇಂಧನಾ ಇಲಾಖೆ, ಲೋಕೋಪಯೋಗಿ ಕಾರ್ಮಿಕ ಇಲಾಖೆ ಸೇರಿದಂತೆ 10ಕ್ಕೂ ಹೆಚ್ಚು ಇಲಾಖೆಗಳ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಈಗಾಗಲೇ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚಿಸಿದ್ದಾರೆ. ಬಹುತೇಕ ಎಲ್ಲ ಇಲಾಖೆಗಳ ಸಚಿವರು ಹೆಚ್ಚು ಅನುದಾನದ ಜೊತೆಗೆ ಹೊಸ ಹೊಸ ಕಾರ್ಯಕ್ರಮಗಳ ಅನುದಾನಕ್ಕೂ ಡಿಮ್ಯಾಂಡ್ ಮಾಡಿದ್ದಾರೆ. ಹೆಚ್ಚು ಅನುದಾನದ ಜೊತೆಗೆ ಹೊಸ ಹೊಸ ಯೋಜನೆಗಳ ಪಟ್ಟಿಯನ್ನು ಬಜೆಟ್ ಪೂರ್ವಭಾವಿ ಸಭೆಗಳಲ್ಲಿ ಮುಖ್ಯಮಂತ್ರಿಯವರ ಮುಂದಿಟ್ಟಿದ್ದಾರೆ. ಜೊತೆಗೆ, ಕ್ಷೇತ್ರ ಅಭಿವೃದ್ಧಿಗಾಗಿ ಶಾಸಕರು ಪಕ್ಷಾತೀತವಾಗಿ ಅನುದಾನದ ಬೇಡಿಕೆ ಇಟ್ಟಿದ್ದಾರೆ. ಶಾಸಕರ ಹಾಗೂ ಸಚಿವರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ, ವಿಶೇಷ ಅನುದಾನ ಘೋಷಿಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಬಜೆಟ್ ಮಂಡನೆ ಮಾಡುವ ವೇಳೆ ಕೇಂದ್ರ ಸರಕಾರದ ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯೂ ಉಲ್ಲೇಖಿಸಲಿರುವ ಸಿಎಂ ಸಿದ್ದರಾಮಯ್ಯ, ನ್ಯಾಯಯುತ ತೆರಿಗೆ ಪಾಲಿಗಾಗಿ ಒತ್ತಡ ಹೇರುವ ಪ್ರಯತ್ನವನ್ನು ಸಿದ್ದರಾಮಯ್ಯ ಮಾಡಲಿದ್ದಾರೆ. ಮೇಕೆದಾಟು ಅಣೆಕಟ್ಟು ಹಾಗೂ ಮಹದಾಯಿ ನೀರಾವರಿ ಯೋಜನೆಗಳ ಪ್ರಸ್ತಾಪ ಮಾಡಲಿದ್ದು, ಅಗತ್ಯ ಅನುದಾನ ಒದಗಿಸಲಿದ್ದಾರೆ ಎಂದು ವಿಶ್ಲೇಷಿಸಲಾಗಿದೆ