ನೆಲಮಂಗಲ (ಬೆಂಗಳೂರು) : ತಾಲೂಕಿನಲ್ಲಿ ಎರಡು ಲಾರಿ ಮತ್ತು ಟಾಟಾ ಏಸ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು, ಘಟನೆಯಲ್ಲಿ ತ್ರಿವೇಣಿ (25) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಶಿರಾ ಮೂಲದವರು ಎಂಬುದು ತಿಳಿದುಬಂದಿದೆ. ಶಿವಕುಮಾರ್ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತ ಮಹಿಳೆ ಕುಟುಂಬ ಇಂದು ಬೆಳಗ್ಗೆ ಟಾಟಾ ಏಸ್ ವಾಹನದಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದ ವೇಳೆ, ಮುಂಬದಿಯಲ್ಲಿದ್ದ ಲಾರಿ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ಟಾಟಾ ಏಸ್ ವಾಹನದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಟ್ರಾಫಿಕ್ ಜಾಮ್ನಿಂದ ಪರದಾಡಿದ ವಾಹನ ಸವಾರರು : ಅಪಘಾತದಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.