ಆಂಧ್ರ ಪ್ರದೇಶದ ಕಾಶಿಬುಗ್ಗ ದೇಗುಲದಲ್ಲಿ ಕಾಲ್ತುಳಿತ ದುರಂತ: 9 ಭಕ್ತರ ದುರ್ಮರಣ, ಹಲವಾರು ಮಂದಿ ಗಾಯಾಳು.

ಆಂಧ್ರ ಪ್ರದೇಶದ ಕಾಶಿಬುಗ್ಗ ದೇಗುಲದಲ್ಲಿ ಕಾಲ್ತುಳಿತ ದುರಂತ: 9 ಭಕ್ತರ ದುರ್ಮರಣ, ಹಲವಾರು ಮಂದಿ ಗಾಯಾಳು.

ಹೈದರಾಬಾದ್ : ಕರ್ನೂಲ್ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಒಂಬತ್ತು ಭಕ್ತರು ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಕಾರ್ತಿಕ ಮಾಸದ ಏಕಾದಶಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ ಎಂದು ಆಂಧ್ರ ಪ್ರದೇಶ ಸಿಎಂ ಕಚೇರಿಯ ಪ್ರಕಟಣೆ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ನಿಜಕ್ಕೂ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದಿದ್ದೇನು?

ಕಾರ್ತಿಕ ಮಾಸದ ಏಕಾದಶಿಯ ಕಾರಣ ದೇಗುಲಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ದರ್ಶನಕ್ಕಾಗಿ ದೇವಾಲಯದಲ್ಲಿ ಭಕ್ತರು ಜಮಾಯಿಸಿದ್ದರು. ಆರಂಭಿಕ ವರದಿಗಳ ಪ್ರಕಾರ, ದೇವಾಲಯದ ಆವರಣದ ಪ್ರವೇಶದ್ವಾರದ ಬಳಿ ಜನಸಂದಣಿಯ ಒತ್ತಡ ಇದ್ದಕ್ಕಿದ್ದಂತೆ ಹೆಚ್ಚಾಯಿತು. ಇದು ಜನರಲ್ಲಿ ಗೊಂದಲವನ್ನು ಉಂಟುಮಾಡಿತು ಮತ್ತು ಕಾಲ್ತುಳಿತಕ್ಕೆ ಕಾರಣವಾಯಿತು. ಅನೇಕ ಜನರು ಕೆಳಗೆ ಬಿದ್ದು ಕಾಲ್ತುಳಿತಕ್ಕೊಳಗಾದರು.

ಪರಿಸ್ಥಿತಿ ನಿಯಂತ್ರಿಸಲು ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ತಂಡಗಳು ಮತ್ತು ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ದೇವಾಲಯಕ್ಕೆ ತಲುಪಿ ಪರಿಸ್ಥಿತಿಯನ್ನು ನಿಭಾಯಿಸಲು ದೇವಾಲಯದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಜನಸಂದಣಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಸಿಎಂ ಚಂದ್ರಬಾಬು ನಾಯ್ಡು ಸಂತಾಪ

‘ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತದಲ್ಲಿ ಭಕ್ತರ ಸಾವು ಅತೀವ ವೇದನೆ ಉಂಟುಮಾಡಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರಿಗೆ ತ್ವರಿತವಾಗಿ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ವಿನಂತಿಸಿದ್ದೇನೆ’ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಕಾಶಿಬುಗ್ಗ ವೆಂಕಟೇಶ್ವರ ದೇಗುಲ ಸರ್ಕಾರಕ್ಕೆ ಸೇರಿದ ದೇಗುಲ ಅಲ್ಲ. ಹೆಚ್ಚು ಭಕ್ತರು ಸೇರಿದ ಬಗ್ಗೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿರಲಿಲ್ಲ ಎಂದು ಆಂಧ್ರ ಪ್ರದೇಶದ ಮುಜರಾಯಿ ಇಲಾಖೆ ಮಾಹಿತಿ ನೀಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *