ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಲ್ಯಾಣ ಕರ್ನಾಟಕದಲ್ಲಿ ವಿಪರೀತ ಚಳಿಯ ವಾತಾವರಣ ಇರಲಿದ್ದು, ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ?
ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರಗಳಲ್ಲಿಯೂ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ
ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.
ಕಲ್ಯಾಣ ಕರ್ನಾಟಕದಲ್ಲಿ ವಿಪರೀತ ಶೀತ
ನವೆಂಬರ್ 18 ರಿಂದ 21ರ ವರೆಗೆ ರಾಜ್ಯದಲ್ಲಿ, ಅದರಲ್ಲಿಯೂ ಉತ್ತರ ಒಳನಾಡು ಪ್ರದೇಶಗಳಲ್ಲಿ ವಿಪರೀತ ಚಳಿ ಕಂಡುಬರಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಧ್ಯಕ್ಕೆ 14°C ತಾಪಮಾನವಿದ್ದು, ಇಂದಿನಿಂದ ಇನ್ನೂ 4 ರಿಂದ 6 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನದಲ್ಲಿ ಕುಸಿತವಾಗಬಹುದೆಂದು ಹೇಳಲಾಗಿದೆ. ಜನರಿಗೆ ಮನೆಯಿಂದ ಹೊರಬರದೆ ಸುರಕ್ಷಿತವಾಗಿರುವಂತೆ ಪ್ರಾಧಿಕಾರ ಸೂಚಿಸಿದೆ. ನವೆಂಬರ್ 21ರ ನಂತರ ತಾಪಮಾನ ಸುಧಾರಿಸಬಹುದೆಂದು ಹೇಳಲಾಗಿದೆ.
For More Updates Join our WhatsApp Group :
