ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ
ದಾವಣಗೆರೆ : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿ ವಿಧಾನ ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ವೀರಶೈವ–ಲಿಂಗಾಯತ ಸಂಪ್ರದಾಯದಂತೆ ನೆರೆವೇರಿದೆ. ಕ್ರಿಯಾಸಮಾಧಿ ಬಳಿಕ ಪಾರ್ಥಿವ ಶರೀರಕ್ಕೆ ಅಭಿಷೇಕ ಮಾಡಲಾಗಿದ್ದು, ಮಣ್ಣು ಹಾಕದೆ ಕ್ರಿಯಾ ಸಮಾಧಿಯಲ್ಲಿ ವಿಭೂತಿ, ಬಿಲ್ವಪತ್ರೆ, ಗಂಗಾಜಲ ಹಾಕುವುದರ ಜೊತೆಗೆ ಕಳಸವಿಟ್ಟು ವಿಧಿವಿಧಾನ ನೆರವೇರಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರ S.S.ಮಲ್ಲಿಕಾರ್ಜುನ್ ಈ ಎಲ್ಲ ಕಾರ್ಯಗಳನ್ನು ನೆರವೇರಿಸಿದ್ದಾರೆ.
ಪಂಚಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ವಿಧಿವಿಧಾನ
ಶ್ರೀ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು, ಶ್ರೀ ಉಜ್ಜಯಿನಿ ಪೀಠದ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಶ್ರೀ ಶೈಲ ಪೀಠದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕಾಶೀ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಮತ್ತು ಕಾಶೀ ಜಗದ್ಗುರು ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳ ಸಮ್ಮುಖದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿ ವಿಧಾನ ನಡೆಸಲಾಗಿದೆ. ಅವರ ಪತ್ನಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆದಿದೆ.
ಸಕಲ ಸರ್ಕಾರಿ ಗೌರವ ಸಲ್ಲಿಕೆ
ಶಾಮನೂರು ಅವರ ಅಂತಿಮ ಸಂಸ್ಕಾರಕ್ಕೂ ಮುನ್ನ ರಾಜ್ಯದ ವತಿಯಿಂದ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಗಿದೆ. ಪಾರ್ಥಿವ ಶರೀರದ ಮೇಲೆ ತ್ರಿವರ್ಣ ಧ್ವಜ ಹೊದಿಸಿ, ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸಿ ಗೌರವ ನೀಡಲಾಗಿದೆ. ಬಳಿಕ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ತ್ರಿವರ್ಣ ಧ್ವಜವನ್ನು ಕುಟುಂಬಸ್ಥರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ಹ ಹಸ್ತಾಂತರಿಸಿದ್ದಾರೆ.
For More Updates Join our WhatsApp Group :




