WPL ನಲ್ಲಿ 5 ವಿಕೆಟ್ ಕಬಳಿಸಿ ನಿರ್ಮಿಸಿದ ಭರ್ಜರಿ ದಾಖಲೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಶ್ರೇಯಾಂಕಾ ಪಾಟೀಲ್ ಈವರೆಗೆ 18 ಪಂದ್ಯಗಳನ್ನಾಡಿದ್ದಾರೆ. ಈ ಹದಿನೆಂಟು ಪಂದ್ಯಗಳಲ್ಲಿ 317 ಎಸೆತಗಳನ್ನು ಎಸೆದಿರುವ ಶ್ರೇಯಾಂಕಾ ಒಟ್ಟು 27 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಮೂರು ಬಾರಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ.
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್ ಕಬಳಿಸುವ ಮೂಲಕ. ಈ ಐದು ವಿಕೆಟ್ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.
ನವಿ ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 9ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 3.5 ಓವರ್ ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ WPL ನಲ್ಲಿ 5 ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ 23 ವರ್ಷದ ಶ್ರೇಯಾಂಕಾ ಪಾಲಾಯಿತು.
ಅಷ್ಟೇ ಅಲ್ಲದೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೂರು ಬಾರಿ 4 ವಿಕೆಟ್ ಕಬಳಿಸಿದ ಬೌಲರ್ ಎಂಬ ಹಿರಿಮೆಗೂ ಪಾತ್ರರಾದರು. ಅಂದರೆ ಶ್ರೇಯಾಂಕಾ ಪಾಟೀಲ್ WPL ನಲ್ಲಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿರುವುದು ಇದು ಮೂರನೇ ಬಾರಿ.
2024ರ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಶ್ರೇಯಾಂಕಾ ಪಾಟೀಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ 2024ರ WPL ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದವೇ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು.
ಇದೀಗ ಗುಜರಾತ್ ಜೈಂಟ್ಸ್ ವಿರುದ್ಧ 5 ವಿಕೆಟ್ ಉರುಳಿಸುವ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೂರು ಬಾರಿ 4 ಅಥವಾ 4+ ವಿಕೆಟ್ ಪಡೆದ ಏಕೈಕ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ WPL ನಲ್ಲಿ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಭರ್ಜರಿ ದಾಖಲೆಯೊಂದನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.
For More Updates Join our WhatsApp Group :




