ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು.
ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಈ ತೀರ್ಪಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಅಧಿಕೃತ ಪುನರಾರಂಭಕ್ಕೆ ಅವಕಾಶ ದೊರೆತಂತಾಗಿದ್ದು, ಉದ್ಯೋಗಾವಕಾಶಗಳು ಕೂಡ ಹೆಚ್ಚುವ ಸಾಧ್ಯತೆ ಇದೆ. ಜೊತೆಗೆ, ಪ್ರಯಾಣಿಕರಿಗೆ ಕಡಿಮೆ ವೆಚ್ಚದ ಹಾಗೂ ಸುಲಭ ಸಾರಿಗೆ ಸೌಲಭ್ಯ ಲಭ್ಯವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನೀತಿಗೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.
ಬೈಕ್ ಟ್ಯಾಕ್ಸಿಗಳು ಅಸುರಕ್ಷಿತ ಹಾಗೂ ಕಾನೂನು ಬಾಹಿರ ಎಂದು ಸರ್ಕಾರ ರಚಿಸಿದ್ದ ಹೈ ಪವರ್ ಕಮಿಟಿ 2025ರ ನವೆಂಬರ್ 26 ರಂದು ಹೈಕೋರ್ಟ್‌ಗೆ ವರದಿ ಸಲ್ಲಿಸಿತ್ತು. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ. ಇದು ಕೇಂದ್ರ ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಯಾಗಲಿದೆ. ಬೈಕ್ ಟ್ಯಾಕ್ಸಿಗಳು ನಗರದಲ್ಲಿ ವಿಪರೀತ ಸಂಚಾರ ದಟ್ಟಣೆಗೆ ಕಾರಣವಾಗುತ್ತವೆ. ಅಲ್ಲದೆ, ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ತರುವ ಸಾಧ್ಯತೆಗಳಿವೆ ಎಂದು ವರದಿಯಲ್ಲಿ ಹೈ ಪವರ್ ಕಮಿಟಿ ಉಲ್ಲೇಖಿಸಿತ್ತು. ಆದರೆ, ಇದೀಗ ಅಂತಿಮವಾಗಿ ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.
For More Updates Join our WhatsApp Group :




