ಹುಬ್ಬಳ್ಳಿ ಮನೆ ಹಂಚಿಕೆ ವಿವಾದ.

ಹುಬ್ಬಳ್ಳಿ ಮನೆ ಹಂಚಿಕೆ ವಿವಾದ.

ಕೇಂದ್ರ ಸಚಿವರಿಗೆ ಆಹ್ವಾನವಿಲ್ಲ: ಬಿಜೆಪಿ ಆಕ್ರೋಶ.

ಹುಬ್ಬಳ್ಳಿ: ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣಗೊಂಡ ಮನೆಗಳ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮ ಇಂದು ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆಯಲಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾದ ಮನೆಗಳ ಹಂಚಿಕೆ ನೆಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು ಹಾಗೂ ಬಿಜೆಪಿ ಶಾಸಕರನ್ನು ಆಹ್ವಾನಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಇಂದು ಬೆಳಗ್ಗೆ 11.30ಕ್ಕೆ ಪ್ರತಿಭಟನೆ ನಡೆಸಲಿದೆ. ಸರ್ಕಾರ ಶಿಷ್ಟಾಚಾರ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿ, ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಂತೆಯೇ ಆಯೋಜನೆಯಾಗಿದೆ ಎಂದು ಟೀಕಿಸಿದೆ. ಪ್ರತಿಭಟನೆಯ ಭಾಗವಾಗಿ ದುರ್ಗದಬೈಲ್ ವೃತ್ತದಿಂದ ಬಸವೇಶ್ವರ ನಗರವರೆಗೆ ರ್ಯಾಲಿ ನಡೆಯಲಿದ್ದು, ಶಾಸಕ ಮಹೇಶ್ ಟೆಂಗಿನಕಾಯಿ, ಶಾಸಕ ಎಂ.ಆರ್. ಪಾಟೀಲ್ ಹಾಗೂ ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಭಾಗಿಯಾಗಲಿದ್ದಾರೆ.

ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

ಕೇಂದ್ರ ಸಚಿವರಿಗೆ ಆಹ್ವಾನ ನೀಡಿಲ್ಲ ಎಂಬ ಆರೋಪವನ್ನು ವಸತಿ ಸಚಿವ ಜಮೀರ್ ಅಹ್ಮದ್ ಅಲ್ಲಗಳೆದಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಆಹ್ವಾನ ನೀಡಿದ್ದೆವು. ಆದರೆ ಅವರು, ವಿದೇಶ ಪ್ರವಾಸ ನಿಗದಿಯಾಗಿರುವುದರಿಂದ ದಿನಾಂಕ ಬದಲಾಯಿಸಲು ಮನವಿ ಮಾಡಿದ್ದರು ಎಂದು ಜಮೀರ್ ಅಹ್ಮದ್ ತಿಳಿಸಿದ್ದಾರೆ.

ಇಂದು ನಡೆಯುವ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ. ಐದು ಜಿಲ್ಲೆಗಳ 20,360 ಫಲಾನುಭವಿಗಳಿಗೆ ಇಂದು ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಸೇರುವ ನಿರೀಕ್ಷೆ ಇದೆ.

ರಾಜ್ಯಾದ್ಯಂತ ಒಟ್ಟು 42,345 ಮನೆಗಳ ಹಸ್ತಾಂತರದ ನೆಪದಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನವೆಂದು ವಿರೋಧ ಪಕ್ಷಗಳು ವ್ಯಾಖ್ಯಾನಿಸುತ್ತಿವೆ. ವಿಶೇಷವಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ರಾಜಕೀಯ ಮಹತ್ವ ಪಡೆದುಕೊಂಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *