ರೀಲ್ಸ್ ಚಿತ್ರೀಕರಣವೇ ಕಾರಣವೇ? ಸ್ಫೋಟಕ ತಿರುವು.
ಬಳ್ಳಾರಿ: ಬಳ್ಳಾರಿಯಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ದೊರೆತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಪ್ರಾಪ್ತರು ಸೇರಿ ಒಟ್ಟು 8 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಳ್ಳಾರಿಯ ಕೌಲ್ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುತ್ತಿರುವ ವೇಳೆ ಅಜಾಗರೂಕತೆಯಿಂದ ಅಥವಾ ದುರುದ್ದೇಶದಿಂದ ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ರುಕ್ಮಿಣಿ ಅವೆನ್ಯೂ ಲೇಔಟ್ನಲ್ಲಿರುವ ಸೈಟ್ ಇಂಜಿನಿಯರ್ ರಿಜ್ವಾನ್ ಅವರು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ಉಲ್ಲೇಖಿಸಿದ ಪ್ರಕಾರ, ಶುಕ್ರವಾರ ಸಂಜೆ ಸುಮಾರು 5.30ರ ವೇಳೆಗೆ 20 ರಿಂದ 25 ವರ್ಷ ವಯಸ್ಸಿನ 8ರಿಂದ 10 ಮಂದಿ ಕಿಡಿಗೇಡಿಗಳು ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಈ ಮಾಡೆಲ್ ಹೌಸ್ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮೀ ಅವರಿಗೆ ಸೇರಿದ್ದಾಗಿದೆ. ಬೆಂಕಿಯಿಂದ ಟಿವಿ, ಕುರ್ಚಿಗಳು, ಸೋಫಾ ಸೆಟ್ಗಳು, ಕಿಚನ್ ಸೆಟ್, ಎಸಿ, ಫ್ರಿಡ್ಜ್, ವುಡನ್ ಬಾಗಿಲುಗಳು ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಂದಾಜು 1.25 ಕೋಟಿ ರೂ. ಮೌಲ್ಯದ ವಸ್ತುಗಳು ಹಾನಿಯಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಜಕೀಯ ಆಯಾಮದಲ್ಲೂ ತನಿಖೆ?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಬಳ್ಳಾರಿಯನ್ನು ಭಸ್ಮ ಮಾಡುತ್ತೇವೆ’ ಎಂಬ ಶಾಸಕ ಭರತ್ ರೆಡ್ಡಿ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸಬೇಕು ಎಂದು ರಿಜ್ವಾನ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಾಜಕೀಯ ಪ್ರೇರಿತ ಕೃತ್ಯವೇ ಎಂಬ ಅಂಶವನ್ನೂ ಪರಿಶೀಲಿಸುತ್ತಿದ್ದಾರೆ.
For More Updates Join our WhatsApp Group :




