ನಾಳೆಯಿಂದ ರಾಜ್ಯಾದ್ಯಂತ ಬಸ್ ಸ್ಥಗಿತ ಸಾಧ್ಯತೆ.
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ನೌಕರರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಇಂದು ಬೆಂಗಳೂರು ಚಲೋ ಪ್ರತಿಭಟನೆ ನಡೆಸಿದ್ದಾರೆ. 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮತ್ತು 2024ರ ಜನವರಿ 1ರಿಂದ ವೇತನ ಪರಿಷ್ಕರಣೆ ಮಾಡಬೇಕೆಂದು ನೌಕರರು ಬಿಗಿಪಟ್ಟು ಹಿಡಿದಿದ್ದು, ಸರ್ಕಾರದ 26 ತಿಂಗಳ ಹಿಂಬಾಕಿ ಮತ್ತು 2025ರ ಏಪ್ರಿಲ್ನಿಂದ ವೇತನ ಪರಿಷ್ಕರಣೆಯ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೆಂಗಳೂರು ಚಲೋ ಪ್ರತಿಭಟನೆ ನಡೆಯುತ್ತಿದ್ದು, ಸಂಜೆ 4 ಗಂಟೆಗೆ ಜಂಟಿ ಕ್ರಿಯಾ ಸಮಿತಿ ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸಲಿದೆ. ಶುಕ್ರವಾರ (ನಾಳೆ) ಬೆಳಗ್ಗೆಯಿಂದ ರಾಜ್ಯಾದ್ಯಂತ ಬಸ್ ಸಂಚಾರವನ್ನು ಸ್ಥಗಿತಗೊಳಿಸಿ ಸಂಪೂರ್ಣ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ದಟ್ಟವಾಗಿದೆ. ನಾವು ಕಷ್ಟದಲ್ಲಿ ದುಡಿಯುವ ವರ್ಗ. ನಮ್ಮ ದುಡಿಮೆಗೆ ತಕ್ಕ ಪ್ರತಿಫಲವನ್ನು ಕೇಳುತ್ತಿದ್ದೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಆಗುವ ಪ್ರಶ್ನೆಯಿಲ್ಲ ಎಂದು ಜಂಟಿ ಕ್ರಿಯಾ ಸಮಿತಿಯ ನಾಯಕರು ಸ್ಪಷ್ಟಪಡಿಸಿದ್ದಾರೆ.
ಇಂದು ಎಂದಿನಂತೆ ಬಸ್ ಸಂಚಾರ
ಇಂದು ನಾಲ್ಕು ಸಾರಿಗೆ ನಿಗಮಗಳಿಂದ ಬೆಂಗಳೂರು ಚಲೋಗೆ ಕರೆ ಹಿನ್ನೆಲೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಬೆಳಿಗ್ಗೆಯಿಂದ ಇಲ್ಲಿಯವರೆಗೂ ಎಲ್ಲಿಯೂ ಅನಾನುಕೂಲಗಳು ಆಗಿರುವ ಬಗ್ಗೆ ವರದಿ ಆಗಿಲ್ಲ. ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮಕೈಗೊಳ್ಳಲು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಆದೇಶ ಮಾಡಿದ್ದು, ತುರ್ತು ಮತ್ತು ಅನಿವಾರ್ಯ ಸಂದರ್ಭ ಹೊರತು ಯಾವುದೇ ರಜೆ ನೀಡಬೇಡಿ ಎಂದು ಸೂಚಿಸಿದ್ದಾರೆ.
For More Updates Join our WhatsApp Group :




