ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ..
ಬಾಗಲಕೋಟೆ : ನಗರದ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಬಾಗಲಕೋಟೆಯ ಬಸ್ ನಿಲ್ದಾಣದ ಸರ್ಕಲ್ ಬಳಿ ನಡೆದಿದೆ. ಜಿಲ್ಲಾಸ್ಪತ್ರೆಯ ಕಡೆಗೆ ವೇಗವಾಗಿ ಹೊರಟಿದ್ದ ಆಂಬುಲೆನ್ಸ್ ಮತ್ತು ಕಾಳಿದಾಸ ವೃತ್ತದ ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ ವಾಹನವು ರಸ್ತೆಯ ಮಧ್ಯದಲ್ಲೇ ಪಲ್ಟಿಯಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಸ್ಥಳೀಯ ಯುವಕರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಪಲ್ಟಿಯಾದ ಆಂಬುಲೆನ್ಸ್‌ನಲ್ಲಿದ್ದ ಗರ್ಭಿಣಿ ಮಹಿಳೆಯನ್ನು ಅತ್ಯಂತ ಜಾಗರೂಕತೆಯಿಂದ ಹೊರತೆಗೆದು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಹನದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ತೀವ್ರತೆಗೆ ಎಲ್ಲರೂ ಗಾಬರಿಗೊಂಡಿದ್ದರು. ಘಟನಾ ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವನಗರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.
For More Updates Join our WhatsApp Group :




