ಮಡಿವಾಳದ ಕಾಲೇಜಿನಲ್ಲಿ ಗಂಭೀರ ಆರೋಪ.
ಬೆಂಗಳೂರು : ಕರ್ನಾಟಕದಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನವೇ ರಾಜಧಾನಿ ಬೆಂಗಳೂರಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ವ್ಯಕ್ತವಾಗಿದೆ. ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರೊಂದಿಗೆ, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ ಮುನ್ನೆಲೆಗೆ ಬಂದಂತಾಗಿದೆ.
ಬೆಂಗಳೂರಿನ ಕಾಲೇಜಿನಲ್ಲಿ ನಡೆದಿದ್ದೇನು?
ಗುರುವಾರ (ಏಪ್ರಿಲ್ 23) ನಡೆದ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ ಎಂಬ ಆರೋಪವಿದೆ. ಇದಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ಧಮಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊನೆಗೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಅನಿವಾರ್ಯವಾಗಿ ಜನಿವಾರವನ್ನು ತೆಗೆಸಿ ಮಗನನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದರು.
ಮತ್ತೆ ಮರುಕಳಿಸಿದ ವಿವಾದ
ಕಳೆದ ವರ್ಷವೂ (2025) ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ವಿವಾದಕ್ಕೀಡಾಗಿತ್ತು. ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜು ಮತ್ತು ಬೀದರ್ನ ಪರೀಕ್ಷಾ ಕೇಂದ್ರಗಳಲ್ಲಿ ಇದೇ ರೀತಿಯ ಘಟನೆಗಳು ನಡೆದು ಭಾರಿ ಸುದ್ದಿಯಾಗಿದ್ದವು. ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಹಾಕಲಾಗಿತ್ತು, ಬೀದರ್ನಲ್ಲಿ ಜನಿವಾರ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿತ್ತು.
ಈ ಕುರಿತು ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸಲ್ಲಿಕೆಯಾಗಿದ್ದು, ಸರ್ಕಾರಕ್ಕೆ ನೋಟಿಸ್ ಜಾರಿಯಾಗಿತ್ತು.
For More Updates Join our WhatsApp Group :



