ಟ್ರಾಫಿಕ್ ಪೊಲೀಸರ ಆರೋಗ್ಯ ರಕ್ಷಣೆಗೆ ಸರ್ಕಾರದ ಕ್ರಮ.

ಟ್ರಾಫಿಕ್ ಪೊಲೀಸರ ಆರೋಗ್ಯ ರಕ್ಷಣೆಗೆ ಸರ್ಕಾರದ ಕ್ರಮ.

ಬಿಸಿಲು, ಧೂಳಿನಿಂದ ರಕ್ಷಣೆ: ಮಾಸ್ಕ್, ನೀರು, ನೆರಳು ವ್ಯವಸ್ಥೆ

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲು ಮತ್ತು ಧೂಳಿನ ನಡುವೆ ರಸ್ತೆಯಲ್ಲಿ ನಿಂತು ಕರ್ತವ್ಯ ನಿರ್ವಹಿಸುವ ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಿದೆ. ಸಂಚಾರ ದಟ್ಟಣೆ ಹಾಗೂ ರಸ್ತೆ ಕಾಮಗಾರಿಗಳಿಂದ ಉಂಟಾಗುತ್ತಿರುವ ವಾಯು ಮಾಲಿನ್ಯದಿಂದ ಸಿಬ್ಬಂದಿಗಳನ್ನು ರಕ್ಷಿಸಲು ವಿಶೇಷ ಸೌಲಭ್ಯಗಳನ್ನು ಒದಗಿಸುವಂತೆ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.

ಪೊಲೀಸ್ ಇಲಾಖೆಯ ಪ್ರಮುಖ ನಿರ್ದೇಶನಗಳು:

ತಾತ್ಕಾಲಿಕ ನೆರಳಿನ ವ್ಯವಸ್ಥೆ: ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ತಕ್ಷಣವೇ ತಾತ್ಕಾಲಿಕ ನೆರಳಿನ ವ್ಯವಸ್ಥೆ ಹಾಗೂ ಪ್ಯಾರಾಚೂಟ್ ಕೊಡೆಗಳನ್ನು ಅಳವಡಿಸಲು ಸೂಚಿಸಲಾಗಿದೆ.

ಆರೋಗ್ಯ ಪಾನೀಯಗಳ ವಿತರಣೆ: ತೀವ್ರ ಬಿಸಿಲಿನಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ (Dehydration) ತಡೆಯಲು ಕರ್ತವ್ಯದಲ್ಲಿರುವ ಸಿಬ್ಬಂದಿಗಳಿಗೆ ಕುಡಿಯುವ ನೀರು, ಮಜ್ಜಿಗೆ ಹಾಗೂ ಎಲೆಕ್ಟ್ರೋಲೈಟ್ ಪಾನೀಯಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ.

ಮಾಸ್ಕ್ ವಿತರಣೆ: ನಗರದಲ್ಲಿ ನಡೆಯುತ್ತಿರುವ ರಸ್ತೆ ನಿರ್ಮಾಣ ಹಾಗೂ ಪೈಪ್‌ಲೈನ್ ಕಾಮಗಾರಿಗಳಿಂದಾಗಿ ಧೂಳಿನ ಪ್ರಮಾಣ ಹೆಚ್ಚಾಗಿದೆ. ಇದು ಉಸಿರಾಟದ ಸಮಸ್ಯೆ ಹಾಗೂ ಧೂಳಿನ ಅಲರ್ಜಿಗೆ ಕಾರಣವಾಗುತ್ತಿರುವುದರಿಂದ, ಸಂಚಾರ ಪೊಲೀಸರಿಗೆ ಕಡ್ಡಾಯವಾಗಿ ಮಾಸ್ಕ್‌ಗಳನ್ನು ವಿತರಿಸಲು ತಿಳಿಸಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ಈ ಕುರಿತು ನೀಡಿದ ದೂರಿನನ್ವಯ, ಪೊಲೀಸ್ ಉಪ ಮಹಾ ನಿರೀಕ್ಷಕರು (ಸಂಚಾರ ಮತ್ತು ರಸ್ತೆ ಸುರಕ್ಷತೆ) ಈ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಸೇರಿದಂತೆ ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರ್ಗಿ ನಗರಗಳ ಪೊಲೀಸ್ ಆಯುಕ್ತರಿಗೆ ಈ ನಿಯಮಗಳನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ಸೂಚನೆ ನೀಡಲಾಗಿದೆ. ಈ ಕ್ರಮವು ಹಗಲಿರುಳು ರಸ್ತೆಯಲ್ಲಿ ಶ್ರಮಿಸುವ ಪೊಲೀಸ್ ಸಿಬ್ಬಂದಿಗಳ ಆತ್ಮಸ್ಥೈರ್ಯ ಹೆಚ್ಚಿಸುವುದರ ಜೊತೆಗೆ ಅವರ ದೈಹಿಕ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಲಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *