ಮೇ 2ರಂದು ಹೈಕೋರ್ಟ್ ಆದೇಶದಂತೆ ಪ್ರಕ್ರಿಯೆ ಆರಂಭ.
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಗೆ ಸಂಬಂಧಿಸಿದ ಅಂಚೆ ಮತಗಳ ಮರು ಎಣಿಕೆ ಕಾರ್ಯಕ್ಕೆ ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾಡಳಿತವು ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಮೇ 2ರಂದು ಬೆಳಗ್ಗೆ 9 ಗಂಟೆಗೆ ಅಭ್ಯರ್ಥಿಗಳು ಹಾಗೂ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಮೊದಲ ಮಹಡಿಯಲ್ಲಿ ಅಂಚೆ ಮತಪತ್ರಗಳ ಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಇದಕ್ಕೆ ಜಿಲ್ಲಾಡಳಿತ ಸಹ ಸಕಲ ಸಿದ್ಧತೆ ಕೈಗೊಂಡಿದೆ. ಒಟ್ಟು 1822 ಅಂಚೆ ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಮೇ 2ರ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯ ವರೆಗೂ ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ, ಮದ್ಯ ಮಾರಾಟ ಬ್ಯಾನ್
ಚಿಕ್ಕಮಗಳೂರಿನ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಮೊದಲ ಮಹಡಿಯಲ್ಲಿ ಅಂಚೆ ಮತ ಮರು ಎಣಿಕೆ ನಡೆಯಲಿದ್ದು, ಮತ ಎಣಿಕೆ ಹಿನ್ನೆಲೆಯಲ್ಲಿ ಮತ ಎಣಿಕಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೇಂದ್ರದ ಒಂದು ಕಿಲೋಮೀಟರ್ ವ್ಯಾಪ್ತಿಯೊಳಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದ್ದು, ಬೆಳಗ್ಗೆ 6ರಿಂದ ರಾತ್ರಿ 11ರವರೆಗೆ ಮದ್ಯ ಮಾರಾಟ ಸಂಪೂರ್ಣ ಬಂದ್ ಇರಲಿದೆ. ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ಸಂಪೂರ್ಣ ತಡೆ ವಿಧಿಸಲಾಗಿದ್ದು, ವಿಜಯೋತ್ಸವ, ಘೋಷಣೆ ಕೂಗು ಹಾಗೂ ಧ್ವನಿವರ್ಧಕಗಳ ಬಳಕೆಗೂ ನಿಷೇಧ ಹೇರಲಾಗಿದೆ. ಸಾರ್ವಜನಿಕ ಶಾಂತಿ ಕಾಪಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸೈಬರ್ ಕಫೆ ಹಾಗೂ ಝರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಲಾಗಿದೆ.
ಶಾಸಕ ಟಿ.ಡಿ.ರಾಜೇಗೌಡ ಅವರ ಮನವಿ ಮೇರೆಗೆ ಆಕ್ಷೇಪಣೆ ಸಲ್ಲಿಸುವುದಕ್ಕೆ ಕೋರ್ಟ್ ಎರಡು ವಾರಗಳ ಕಾಲ ಅವಕಾಶ ನೀಡಿತ್ತು. ಆಕ್ಷೇಪಣೆ ಸಲ್ಲಿಸುವ ಅವಧಿ ಏಪ್ರಿಲ್ 20 ಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿಇದೀಗ ಜಿಲ್ಲಾ ಚುನಾವಣಾಧಿಕಾರಿ ಮತ ಎಣಿಕೆ ಕಾರ್ಯಕ್ಕೆ ಕ್ರಮ ಕೈಗೊಂಡಿದ್ದಾರೆ.
For More Updates Join our WhatsApp Group :



