ಅಕ್ರಮ ಆಸ್ತಿ ಗಳಿಕೆ ಆರೋಪ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿ.ಕೆ.ಶಿವಕುಮಾರ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ಮೊದಲ ಬಾರಿಗೆ ಅವರು ವಿಚಾರಣೆಗೆ ಹಾಜರಾದರು.

ಸಚಿವ ಸಂಪುಟ ಸಭೆ ಮುಗಿದ ಬಳಿಕ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಅವರು, ತನಿಖಾಧಿಕಾರಿ ಡಿವೈಎಸ್​ಪಿ ಎಂ.ಹೆಚ್.ಸತೀಶ್ ಮುಂದೆ ಹಾಜರಾಗಿದ್ದಾರೆ.

2013ರಿಂದ‌ 2018ರ ವರೆಗೆ 74.93 ಕೋಟಿ ರೂ ಮೌಲ್ಯದ ಆಸ್ತಿ ಸಂಪಾದನೆ ಆರೋಪ ಸಂಬಂಧ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಿದ್ದ ರಾಜ್ಯ ಸರ್ಕಾರ, ಬಳಿಕ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ವಹಿಸಿತ್ತು.

ಅಕ್ರಮ ಆಸ್ತಿ ಗಳಿಕೆ ಸಂಬಂಧ ಈ ಹಿಂದೆ ಸಿಬಿಐ ತನಿಖಾಧಿಕಾರಿಗಳಿಗೆ ಒದಗಿಸಿದ ಮಾಹಿತಿ ಹಾಗೂ ದಾಖಲಾತಿಗಳನ್ನು ಪಡೆದಿದ್ದ ಲೋಕಾಯುಕ್ತ ಅಧಿಕಾರಿಗಳು, ಎಫ್ಐಆರ್ ದಾಖಲಿಸಿಕೊಂಡಿದ್ದರು. ಇಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದರು.

ಡಿ.ಕೆ.ಶಿವಕುಮಾರ್ ಏಪ್ರಿಲ್ 1, 2013ರಿಂದ ಏಪ್ರಿಲ್ 30, 2018ರ ಅವಧಿಯಲ್ಲಿ ಆದಾಯಕ್ಕೆ ಅಸಮಾನವಾಗಿ 74.93 ಕೋಟಿ ರೂಪಾಯಿಗಳಷ್ಟು ಸಂಪತ್ತು ಸಂಗ್ರಹಿಸಿದ್ದಾರೆ ಎಂದು ಸಿಬಿಐ ಹೇಳಿತ್ತು. 2019ರ ಸೆಪ್ಟೆಂಬರ್ 9ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿ ತನಿಖೆ ನಡೆಸಲು ಅಂದಿನ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಡಿಕೆಶಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿ ರದ್ದುಪಡಿಸಿ ಆದೇಶಿಸಿತ್ತು.

Leave a Reply

Your email address will not be published. Required fields are marked *