ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ

ಬೆಂಗಳೂರು: ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು. “ಕುಮಾರಸ್ವಾಮಿ ಅವರು ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶ ನೀಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು ಎಂದು ವಾಗ್ದಾಳಿ ನಡೆಸಿದರು.

ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಅವರು ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು. ಇದು ನಮ್ಮ ಜಿಲ್ಲೆ. ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು ಎಂದು ತಿಳಿಸಿದರು.

Leave a Reply

Your email address will not be published. Required fields are marked *