ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸೂಚನೆ

ಬೆಂಗಳೂರು: ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

ಕೃಷಿ ಪಂಪ್ಸೆಟ್ ಗಳಿಗೆ ಆಧಾರ್ ಜೋಡಣೆ ಕಾರ್ಯವನ್ನು ತಕ್ಷಣ ಕೈಬಿಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕು. ಕೃಷಿ ಸಾಲ ಮರುಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್ ನಿರ್ಮಾಣ ಕಾಯ್ದೆ ರದ್ದು ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.

ಬರ, ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ವೈಜ್ಞಾನಿಕ ಮಾನದಂಡಗಳ ಅನ್ವಯ ಪರಿಹಾರ ಕೊಡಬೇಕು. ಖಾಸಗಿ ಫೈನಾನ್ಸ್, ಬ್ಯಾಂಕ್ ಸಾಲ ವಸೂಲಿ ನೆಪದಲ್ಲಿ ರೈತರಿಗೆ ಕಿರುಕುಳ ನೀಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಜಿಂದಾಲ್ ಗೆ ನೀಡಿದ 3667 ಎಕರೆ ಜಮೀನು ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಒತ್ತಾಯಿಸಿದ್ದಾರೆ. ನಿಯೋಗದ ಮನವಿ ಆಲಿಸಿದ ಸಿಎಂ, ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *