ಬೆಂಗಳೂರು: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣದಲ್ಲಿ ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ಗೆ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದ್ದು, ಈ ಕುರಿತ ತನಿಖೆ ಎದುರಿಸುವಂತಾಗಿದೆ.
ನಕಲಿ ಜಾತಿ ಪ್ರಮಾಣ ಪತ್ರ ಪಡೆದಿರುವ ಆರೋಪದಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಂಜುನಾಥ್ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಅರ್ಜಿ ವಜಾಗೊಳಿಸಿದ್ದು, ಆದಷ್ಟು ಶೀಘ್ರ ತನಿಖೆ ಪೂರ್ಣಗೊಳಿಸಲು ಸೂಚನೆ ನೀಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ್ದ ವಿಶೇಷ ವಕೀಲರು, ”ಅರ್ಜಿದಾರರು ನಕಲಿ ಜಾತಿ ಪ್ರಮಾಣಪತ್ರವನ್ನು ಸಲ್ಲಿಸುವ ಮೂಲಕ ಮೀಸಲು ಕ್ಷೇತ್ರವನ್ನು ಕಸಿದುಕೊಂಡಿದ್ದಾರೆ. ಹಾಗಾಗಿ, ಅವರ ವಿರುದ್ಧ ತನಿಖೆ ಆಗಲೇಬೇಕು. ಅವರ ಅರ್ಜಿ ಮಾನ್ಯ ಮಾಡಿದರೆ ಕಳ್ಳನೇ ಕದ್ದ ಮಾಲನ್ನು ಇಟ್ಟುಕೊಳ್ಳಲು ಪ್ರೋತ್ಸಾಹಿಸಿದಂತಾಗುತ್ತದೆ” ಎಂದು ನ್ಯಾಯಾಲಯಕ್ಕೆ ವಿವರಿಸಿದ್ದರು.
ಕೊತ್ತೂರು ಜಿ. ಮಂಜುನಾಥ್ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಅವರು ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಈ ಪ್ರಕರಣ ತಹಶೀಲ್ದಾರ್, ಜಿಲ್ಲಾಧಿಕಾರಿ, ಸಿವಿಲ್ ನ್ಯಾಯಾಲಯ ಮತ್ತು ಹೈಕೋರ್ಟ್ನಲ್ಲಿ ವಿಚಾರಣೆಗೊಳಪಟ್ಟಿತ್ತು. ಅಂತಿಮವಾಗಿ ಹೈಕೋರ್ಟ್ 2018ರಲ್ಲಿ ಮಂಜುನಾಥ್ ಅರ್ಜಿಯನ್ನು ವಜಾಗೊಳಿಸಿ ಅನರ್ಹಗೊಳಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿ, ಜಾತಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು. ಜಾತಿ ಪರಿಶೀಲನಾ ಸಮಿತಿಯ ನಿರ್ಣಯದ ಬಗ್ಗೆ ಆಕ್ಷೇಪವಿದ್ದರೆ ಪುನಃ ಅದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಬಹುದು ಎಂದೂ ಸುಪ್ರೀಂಕೋರ್ಟ್ ಹೇಳಿತ್ತು. ಅದರಂತೆ, ಜಿ. ಮಂಜುನಾಥ್ ಅವರು ಬುಡಗ ಜಂಗಮ ಜಾತಿಗೆ ಸೇರಿಲ್ಲ. ಅವರು ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ನಿರ್ಣಯ ಕೈಗೊಂಡಿತ್ತು. ಅದನ್ನು ಮಂಜುನಾಥ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಬುಡಗ ಜಂಗಮ ಪರಿಶಿಷ್ಟ ಜಾತಿಯಾದರೆ, ಬೈರಾಗಿ ಒಬಿಸಿ ಪ್ರವರ್ಗ-1ಕ್ಕೆ ಸೇರುತ್ತದೆ. ಆನಂತರ 2018ರಲ್ಲಿ ಮುಳಬಾಗಿಲು ಠಾಣೆಯಲ್ಲಿ ಮಂಜುನಾಥ್ ವಿರುದ್ಧ ನಕಲಿ, ವಂಚನೆ, ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಅದನ್ನು ಪ್ರಶ್ನಿಸಿ ಅವರು ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದರು.