ಬೆಂಗಳೂರು: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬುಧವಾರ ಬೆಂಗಳೂರಿನಾದ್ಯಂತ ಪ್ರಾಣಿ ವಧೆ, ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳು ಎರಡೂ ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಮತ್ತೊಂದೆಡೆ, ಗೌರಿ ಗಣೇಶ ಹಬ್ಬದ ಸಂಬ್ರಮ ಬೆಂಗಳೂರಿನಲ್ಲಿ ಕಳೆಗಟ್ಟಿದೆ. ಕೆಆರ್ ಮಾರುಕಟ್ಟೆಯಲ್ಲಿ ಹೂವು-ಹಣ್ಣು ಖರೀದಿ ಭರಾಟೆ ಜೋರಾಗಿದೆ.
ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಪ್ಲಾಸ್ಟರ್ ಆಫ್ ಪ್ಯಾರೀಸ್ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಇತ್ತ ಬಿಬಿಎಂಪಿ ಕೂಡ ಪರಿಸರಸ್ನೇಹಿ ಗಣಪನ ಮೂರ್ತಿ ಖರೀದಿಸಿ ಹಬ್ಬ ಆಚರಿಸುವಂತೆ ಕರೆ ನೀಡಿದ್ದು, ಆ ನಿಟ್ಟಿನಲ್ಲಿ ನಟ-ನಟಿಯರ ಮೂಲಕ ಜಾಗೃತಿಯನ್ನೂ ಮೂಡಿಸುತ್ತಿದೆ.
ಗಣೇಶ ಹಬ್ಬದಂದು ಪರಿಸರಕ್ಕೆ ಹಾನಿಯುಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳನ್ನು ಬಳಸದೆ, ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಆಚರಿಸಲು ಹಾಸ್ಯ ನಟರಾದ ಪುಷ್ಪ ರಾಜ್ ಬೊಳ್ಳರ್ ರವರು ಹಾಗೂ ಖ್ಯಾತ ನಟಿ ಸಿಂಧು ಲೋಕನಾಥ್ ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ ಎಂದು ಎಕ್ಸ್ ಸಂದೇಶದಲ್ಲಿ ಬಿಬಿಎಂಪಿ ತಿಳಿಸಿದೆ.
ಬೆಂಗಳೂರಿನ ಹೃದಯ ಭಾಗದ ಕೆ.ಆರ್. ಮಾರ್ಕೆಟ್‌ನಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಭರ್ಜರಿ ಖರೀದಿ ನಡೆಯುತ್ತಿದೆ. ಬೆಳಗ್ಗೆ ನಾಲ್ಕು ಗಂಟೆಯಿಂದಲೇ ಜನರು ಹೂವು, ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ಖರೀದಿಸಲು ಆಗಮಿಸುತ್ತಿದ್ದಾರೆ. ಹಬ್ಬದ ಸಮಯದಲ್ಲಿ ಹೂವುಗಳ ಬೆಲೆಯಲ್ಲಿ ಏರಿಕೆಯಾಗುವುದು ಸಾಮಾನ್ಯವಾಗಿದ್ದರೂ, ಈ ಬಾರಿಯ ಏರಿಕೆ ಗಮನಾರ್ಹವಾಗಿದೆ.
For More Updates Join our WhatsApp Group :