ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳು ಮಳೆಯ ವಾತಾವರಣವಿರುವ ಸಾಧ್ಯತೆ ಇದೆ. ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಿತವಾದ ಗಾಳಿ ಬೀಸುತ್ತಿದೆ. ಏಪ್ರಿಲ್ 3ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.
ಏಪ್ರಿಲ್ 3ರಂದು ತುಮಕೂರು, ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವೆಡೆ ಮಳೆ ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕೆಲವು ನಗರಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದೆ. ಹಳಿಯಾಳ, ಧಾರವಾಡ, ಹುನಗುಂದ, ಕಿತ್ತೂರು, ಹುಬ್ಬಳ್ಳಿಯಲ್ಲಿ ಮಳೆಯಾಗಿದೆ. ತಾಪಮಾನದಲ್ಲಿ ಏರಿಕೆ ಮತ್ತು ಇಳಿಮುಖವಾಗುವ ಲಕ್ಷಣಗಳು ಗೋಚರಿಸುತ್ತಿವೆ.
ರಾಜ್ಯದ ಉಷ್ಣತೆ ವಿವರಗಳು: ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಚಾಮರಾಜನಗರದಲ್ಲಿ 14.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.