ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆರ್ಎಂವಿ 2ನೇ ಹಂತದಲ್ಲಿರುವ ಮನೆಯೊಂದರಲ್ಲಿ ನಡೆದಿದೆ.
ಮೃತರನ್ನು ಅನೂಪ್ (38), ಅವರ ಪತ್ನಿ ರಾಖಿ (35), ಮತ್ತು ಐದು ಹಾಗೂ 2 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸದಾಶಿವನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಮಕ್ಕಳಿಬ್ಬರಿಗೂ ವಿಷಪ್ರಾಶನ ಮಾಡಿದ ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಅಲಹಾಬಾದ್ ಮೂಲದ ಅನೂಪ್, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಕನ್ಸಲ್ಟೆಂಟ್ ಆಗಿ ಅನೂಪ್ ಕೆಲಸ ಮಾಡುತ್ತಿದ್ದರು. ಆರ್ಥಿಕ ನಷ್ಟದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ನಿರ್ಧರಿಸಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಸದಾಶಿವನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.