ಬೆಂಗಳೂರು: ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು ನಾಳೆ ಜನವರಿ 07 ರಂದು ಮಂಗಳವಾರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರಕ್ಕೂ ಮೊದಲೇ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸುವ ಮೂಲಕ ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದೆ. ಪ್ರತಿಭಟನೆ ನಡೆದರೆ ರಾಜ್ಯದ ಆರೋಗ್ಯ ವಲಯದಲ್ಲಿ ಪರಿಸ್ಥಿತಿ ಬಿಗುಡಾಯಿಸುವ ಸಾಧ್ಯತೆ ಮನಗಂಡು ಸರ್ಕಾರ ಸುತ್ತೋಲೆ ಹೊರಡಿಸಿದೆ ಎನ್ನಲಾಗಿದೆ.
ಸೂಕ್ತ, ನಿಗದಿತ ವೇತನ ಒದಗಿಸಬೇಕು ಹಾಗೂ ಸರ್ಕಾರ ಪ್ರೋತ್ಸಾಹ ಧನವನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಜ.7ಕ್ಕೆ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ. ಮುಷ್ಕರ ವಿರುದ್ಧ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಆಶಾ ಕಾರ್ಯಕರ್ತೆಯರ ರಜೆ ರದ್ದು, ಮಾಹಿತಿ ಸಂಗ್ರಹಿಸಿ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ರಜೆ ನೀಡಬಾರದು. ಅಂದು ರಾಜ್ಯದಲ್ಲಿ ಆರೋಗ್ಯ ವಲಯದಲ್ಲಿ ಯಾವುದೇ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಬೇಕು. ರಜೆ ಹಾಕುವ ಕಾರ್ಯಕರ್ತೆಯರ ಮಾಹಿತಿ ಸಂಗ್ರಹಿಸಬೇಕು. ಅಗತ್ಯವಿದ್ದ ಕಡೆ ಅಂಗನವಾಡಿ ಕಾರ್ಯಕರ್ತೆಯರು ಸಹಕಾರದಲ್ಲಿ ಅಗತ್ಯ ಆರೋಗ್ಯ ಸೇವೆ ಒದಗಿಸಬೇಕು ಎಂದು ಸೂಚನೆ ನೀಡಲಾಗಿದೆ. ಆರೋಗ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯ, ತೊಂದರೆ ಆಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸ್ಥಳೀಯ ಮಟ್ಟದಲ್ಲಿ ಆರೋಗ್ಯಾಧಿಕಾರಿಗಳು, ಸಮುದಾಯ ನಿರೀಕ್ಷಿಕರು, ಅಂಗನವಾಡಿ ಕಾರ್ಯಕರ್ತೆಯರು ಸೂಕ್ತ ಕ್ರಮಹಿಸಬೇಕು ಎಂದು ತಿಳಿಸಿದೆ.
ಸರ್ಕಾರದ ಸುತ್ತೋಲೆಯಲ್ಲಿ ಏನಿದೆ? ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟ ಹೋರಾಟಕ್ಕೆ ಕರೆ ನೀಡಿದ್ದಾರೆ. ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ.
ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನೆರವಾಗುವುದು ಆಶಾ ಕಾರ್ಯಕರ್ತೆಯರ ಪ್ರಮುಖ ಜವಾಬ್ದಾರಿ ಆಗಿರುತ್ತದೆ. ಆಶಾ ಕಾರ್ಯಕರ್ತೆಯರ ಸೇವೆಯು ಸ್ವಯಂ ಸೇವಾ ನೆಲೆಗಟ್ಟಿನಲ್ಲಿದ್ದರೂ ಸಹ ಇವರಿಗೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ವತಿಯಿಂದ ಗೌರವಧನ, ಪ್ರೋತ್ಸಾಹ ಧನ ಮಾಹೆವಾರು ಈ ಕೆಳಗಿನಂತೆ ನೀಡಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ. ಆಶಾ ಕಾರ್ಯಕರ್ತೆಯರು ಪಡೆಯುತ್ತಿರುವ ಹಣದ ವಿವರ * ರಾಜ್ಯ ಸರ್ಕಾರದ ವತಿಯಿಂದ ಮಾಸಿಕ ಗೌರವಧನ ರೂ.5000/- ಗಳನ್ನು ನೀಡಲಾಗುತ್ತಿದೆ. * ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಎಂಟು ಆವರ್ತಕ ಮತ್ತು ನಿಯಮಿತ ಚಟುವಟಿಕೆಗಳಿಗೆ ಮಾಸಿಕ ಪ್ರೋತ್ಸಾಹಧನ ರೂ.2000/-ಗಳನ್ನು ನೀಡಲಾಗುತ್ತಿದೆ. ಆಯುಷ್ಮಾನ್ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತೆಯರಿಗೆ ಮಾಸಿಕ ರೂ.1000/-ಗಳ ಟೀಮ್ ಬೇಸ್ಟ್ ಇನ್ಸೆಂಟಿವ್ ಕೊಡಲಾಗುತ್ತಿದೆ. * 34 ಆರೋಗ್ಯ ಚಟುವಟಿಕೆಗಳ ಕಾರ್ಯಕ್ರಮ ಅನುಷ್ಠಾನದ ಆಧಾರದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು
ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ (PMSBY) ಯಡಿಯಲ್ಲಿ ತಲಾ ಎರಡು ಲಕ್ಷಗಳ ರೂ. ವಿಮಾ ಸೌಲಭ್ಯಮುಖಾಂತರ ಸಾಮಾಜಿಕ ಸುರಕ್ಷೆ ಒದಗಿಸಲಾಗಿದೆ. * ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆಯ ವೈದ್ಯಕೀಯ ವಿಮಾ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ. * ಆಶಾ ಕಾರ್ಯಕರ್ತೆಯರು ಇಲಾಖೆಯ ಇತರ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರೊಂದಿಗೆ ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿ ವಿನಿಮಯಕ್ಕಾಗಿ ಸಿಯುಜಿ ಸಿಮ್ಗಳ ಸೌಲಭ್ಯವನ್ನು ಕಲ್ಪಿಸುವ ಅವಕಾಶ ಇದೆ. * ಆಶಾ ಕಾರ್ಯಕರ್ತೆಯರು ಆರೋಗ್ಯ ಚಟುವಟಿಕೆಗಳನ್ನು ಸ್ಮಾರ್ಟ್ ಫೋನ್ ಬಳಸಿ ದಾಖಲಿಸಲು ಮಾಸಿಕ ರೂ.280/- ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ ಎರಡು ಜೊತೆ ಸಮವಸ್ತ್ರಗಳನ್ನು ನೀಡಲಾಗುತ್ತಿದೆ. * ದಾಖಲಿಸಲು ಮಾಸಿಕ ರೂ.280/- ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ ಎರಡು ಜೊತೆ ಸಮವಸ್ತ್ರಗಳನ್ನು ನೀಡಲಾಗುತ್ತಿದೆ. ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ತ್ರೈಮಾಸಿಕ ಆಶಾ ಕಾರ್ಯಕರ್ತೆಯರ ಕುಂದುಕೊರತೆ ನಿವಾರಣಾ ಸಭೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದೆ. * ರಾಜ್ಯ ಮಟ್ಟದಲ್ಲಿ ಆಶಾ ಸಂಘಟನೆಯ ಮುಖಂಡರ ಜೊತೆ ನಿರಂತರವಾಗಿ ಸಭೆಗಳನ್ನು ಸಹ ಸಂಧರ್ಭಕ್ಕೆ ಅನುಸಾರವಾಗಿ ನಡೆಸಿ ನೈಜ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿರುತ್ತದೆ ಎಂದೆಲ್ಲ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ಸರ್ಕಾರ ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಮಣಿಯುವುದಿಲ್ಲ ಎಂಬ ಸಂದೇಶ ಪರೋಕ್ಷವಾಗಿ ರವಾನಿಸಿದಂತಿದೆ.