ಬೆಂಗಳೂರು: ನಗರದ ಚಂದ್ರಾ ಲೇಔಟ್ನಲ್ಲಿ ನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ಅವರ ಪ್ರಕಾರ, ಬುರ್ಖಾ ಧರಿಸಿದ ಮಹಿಳೆಯೊಬ್ಬರು ಯುವಕನೊಂದಿಗೆ ಸ್ಕೂಟರ್ನಲ್ಲಿ ಕುಳಿತಿದ್ದಾಗ, ಅಲ್ಲಿಗೆ ಬಂದ ನಾಲ್ವರು ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಮಾತನಾಡಿದ ಕಾರಣಕ್ಕಾಗಿ ಅವರಿಗೆ ತೊಂದರೆ ನೀಡಿದ್ದಾರೆ.
‘ಈ ಸಂಬಂಧ ಮಹಿಳೆ ನಮಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಒಬ್ಬ ಬಾಲಾಪರಾಧಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದೇವೆ’ ಎಂದು ಗಿರೀಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
‘ಈ ಘಟನೆಯಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಈ ಪ್ರಕರಣದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದೇವೆ’ ಎಂದು ಅವರು ಹೇಳಿದರು.