ಪರಿಹಾರ ನೀಡಿ ಕೈ ತೊಳೆದುಕೊಳ್ಳುವುದಲ್ಲ, ದುರಂತ ಮರುಕಳಿಸಿದಂತೆ ಶಾಶ್ವತ ಪರಿಹಾರ ರೂಪಿಸಿ.
ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ಏಳು ಜನರ ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಮಳೆ ಅನಾಹುತಗಳು ಸಂಭವಿಸಿದಂತೆ ಶಾಶ್ವತ ಪರಿಹಾರೋಪಾಯಗಳನ್ನು ರೂಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಸಂದರ್ಭದಲ್ಲಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಮಕ್ಕಳು ಸೇರಿ ಏಳು ಜನರು ದುರ್ಮರಣಕ್ಕೆ ತುತ್ತಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಈ ಹೃದಯವಿದ್ರಾವಕ ದುರಂತ ನನ್ನ ಮನ ಕಲಕಿದೆ ಎಂದಿದ್ದಾರೆ.
ಮೃತರ ಕುಟುಂಬಗಳಿಗೆ ನನ್ನ ಪ್ರಗಾಢ ಸಂತಾಪಗಳು ಹಾಗೂ ರಾಜ್ಯ ಸರಕಾರವು ಗಾಯಾಳುಗಳಿಗೆ ಎಲ್ಲಾ ಬಗೆಯ ತುರ್ತುಚಿಕಿತ್ಸೆ ನೀಡಿ ಅವರ ಕುಟುಂಬಗಳಿಗೆ ಅಗತ್ಯ ನೆರವು ನೀಡಬೇಕು ಮತ್ತು ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ಹೇಳಿದಾರೆ.
ಪ್ರತಿ ಬಾರಿ ಮಳೆ ಬಂದಾಗಲೂ ದುರಂತಗಳು ಸಂಭವಿಸುತ್ತಿವೆ. ಸರಕಾರ ಪಾಠ ಕಲಿಯುತ್ತಿಲ್ಲ. ನಗರದಲ್ಲಿ ಇಂತಹ ಅನಾಹುತಗಳು ಸಂಭವಿಸಿದಂತೆ ಶಾಶ್ವತ ಪರಿಹಾರಗಳನ್ನು ರೂಪಿಸುವ ಅಗತ್ಯವಿದೆ. ಇಷ್ಟಕ್ಕೂ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದಿದ್ದು ಹೇಗೆ? ಅದನ್ನು ಯಾವಾಗ ನಿರ್ಮಿಸಿದ್ದರು? ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಇದು ಯಾರ ನಿರ್ಲಕ್ಷ ಎಂಬುದನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದ್ದಾರೆ.
ಸರಕಾರವು ಮೃತರ ಕುಟುಂಬಗಳ ನೆರವಿಗೆ ಧಾವಿಸುವುದು ಎಂದರೆ ಪರಿಹಾರ ನೀಡಿ ಕೈ ತೊಳೆದುಕೊಳ್ಳುವುದಲ್ಲ. ಇಂತಹ ಘೋರ ಘಟನೆಗಳು ಮರುಕಳಿಸದಂತೆ ಕಠಿಣ ಮುನ್ನೆಚ್ಚರಿಕೆ ವಹಿಸಬೇಕು. ಮಳೆ ನಿರ್ವಹಣೆ, ಕಟ್ಟೆಚ್ಚರ ಎಂದರೆ ನಿರಂತರ ಪ್ರಕ್ರಿಯೆ. ಆದರೆ, ಇಲ್ಲಿ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ನಡೆಯುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
For More Updates Join our WhatsApp Group :




