ಬೆಂಗಳೂರು: ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರು ಪ್ರಶ್ನೆಗೆ ಉತ್ತರಿಸಿದ ಅವರು “ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಇಂದು ಇವರುಗಳು ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ ಎಂದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾನು, ಸಿದ್ದರಾಮಯ್ಯ ಅವರು ಪಕ್ಷದ ಹಿತ ದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎನ್ನುವ ಬಗ್ಗೆ ತೀರ್ಮಾನಕ್ಕೆ ಬಂದಿದ್ದೇವೆ. ಈ ವಿಚಾರವಾಗಿ ಯಾವುದೇ ಮಂತ್ರಿಗಳು, ಶಾಸಕರು, ಸ್ವಾಮೀಜಿಗಳು ಮಾತನಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು