ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪಡೆದಿರುವುದನ್ನು ಪ್ರಶ್ನಿಸಿ ಎಸ್ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.
ನಿರೀಕ್ಷಣಾ ಜಾಮೀನು ರದ್ದು ಕೋರಿ ಎಸ್ಐಟಿ ಅಧಿಕಾರಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ನಾಳೆ ಅರ್ಜಿ ವಿಚಾರಣೆ ಬರಲಿದೆ. ಒಂದು ವೇಳೆ ಜಾಮೀನು ರದ್ದುಗೊಂಡರೆ ಭವಾನಿ ರೇವಣ್ಣಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ. ನಾಳೆ, ಅರ್ಜಿ ವಿಚಾರಣೆಗೆ ಬರುವ ಹಿನ್ನೆಲೆಯಲ್ಲಿ ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಪ್ರಕರಣ ತನಿಖಾಧಿಕಾರಿ ಡಿವೈಎಸ್ಪಿ ಹೇಮಂತ್ ಕುಮಾರ್, ಸರ್ಕಾರಿ ಅಭಿಯೋಜಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ದಾಖಲಾಗಿರುವ ಅತ್ಯಾಚಾರದ ಪ್ರಕರಣ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಭವಾನಿ ರೇವಣ್ಣ ಮೇಲಿದ್ದು ಎಸ್ಐಟಿ ಅಧಿಕಾರಿಗಳು ಬಂಧಿಸಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಪಡೆದು ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದರು. ಮತ್ತೊಂದೆಡೆ ತನಿಖೆಗೆ ಸಹಕರಿಸಿಲ್ಲ ಎಂದು ಪ್ರಾಸಿಕ್ಯೂಷನ್ ಪರ ಪ್ರೊ.ರವಿಕುಮಾರ್ ವರ್ಮಾ ಹೈಕೋರ್ಟ್ನಲ್ಲಿ ವಾದ ಮಂಡಿಸಿದ್ದರು.
ಮೂರು ದಿನಗಳಲ್ಲಿ ಒಟ್ಟು 85 ಪ್ರಶ್ನೆಗಳನ್ನು ಕೇಳಲಾಗಿತ್ತು. ಎಲ್ಲದಕ್ಕೂ ಆಕೆ ಉತ್ತರಿಸಿದ್ದಾರೆ. ನೀವು ಬಯಸಿದಂತೆ ಆಕೆ ಉತ್ತರಿಸಲಾಗದು ಎಂದು ಅಭಿಪ್ರಾಯಪಟ್ಟ ಹೈಕೋರ್ಟ್ ಜೂನ್ 18ರಂದು ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಅರ್ಜಿ ಪುರಸ್ಕರಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಎಸ್ಐಟಿ ಸುಪ್ರೀಕೋರ್ಟ್ ಮೊರೆ ಹೋಗಿದ್ದು ನಾಳೆ ಅರ್ಜಿ ವಿಚಾರಣೆ ನಡೆಯಲಿದೆ.