ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ರದ್ದು ಮಾಡಿದ ಹೈಕೋರ್ಟ್.
ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಸಿ ಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಹೈಕೋರ್ಟ್ ಪೀಠ, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶಿಸಿದೆ. ಇನ್ನು ಅಸಿಂಧುಗೊಳಿಸಿದ ಆದೇಶವನ್ನು ಕೋರ್ಟ್, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ರವಾನಿಸಿದೆ.
ಚುನಾವಣೆಯಲ್ಲಿ ಎಸ್.ಎನ್. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು ಕೋರ್ಟ್ ಮೆಟ್ಟಿಲೇರಿದ್ದರು. ಇನ್ನೊಂದೆಡೆ ಸುಬ್ಬಾರೆಡ್ಡಿ ಸಹ ತಮ್ಮ ಅರ್ಜಿ ವಜಾ ಮಾಡಬೇಕೆಂದು ಮನವಿ ಮಾಡಿದ್ದರು. ಚುನಾವಣಾ ತಕರಾರು ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಅದನ್ನು ವಜಾಗೊಳಿಸಬೇಕೆಂದು ಸುಬ್ಬಾರೆಡ್ಡಿ ಮನವಿ ಮಾಡಿದ್ದರು. ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್, ಸುಬ್ಬಾರೆಡ್ಡಿ ಅರ್ಜಿಯನ್ನು ವಜಾ ಮಾಡಿತ್ತು. ಇದೀಗ ಕೋರ್ಟ್, ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿದೆ. ಆದ್ರೆ, ಎದುರಾಳಿ ಅಭ್ಯರ್ಥಿಯಾಗಿದ್ದ ಸಿ.ಮುನಿರಾಜು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ.
ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ
ಮೇಲ್ಮನವಿ ಸಲ್ಲಿಕೆವರೆಗೆ ತನ್ನ ಆದೇಶಕ್ಕೆ ತಡೆಯಾಜ್ಞೆ ನೀಡಲು ಎಸ್.ಎನ್.ಸುಬ್ಬಾರೆಡ್ಡಿ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ಮನವಿ ಮಾಡಿದ್ದಾರೆ. ಆದ್ರೆ, ಈ ಮನವಿಗೆ ಅರ್ಜಿದಾರರ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಕೋರ್ಟ್, ಅಸಿಂಧು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹೀಗಾಗಿ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದ್ದು, ಸುಪ್ರೀಂಕೋರ್ಟ್ ಮೊರೆ ಹೋಗುವುದೊಂದೇ ಸುಬ್ಬಾರೆಡ್ಡಿಗೆ ಉಳಿದ ಮಾರ್ಗ.
For More Updates Join our WhatsApp Group :




