ಬೆಂಗಳೂರು: ಉಪಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಸದಸ್ಯತ್ವ ಅಭಿಯಾನದಲ್ಲಿ 50 ಲಕ್ಷ ಮಂದಿ ನೋಂದಣಿಯಾಗಿದ್ದಾರೆಂದು ಬಿಜೆಪಿ ಹೇಳಿಕೊಂಡಿದ್ದು, ಮೂರೂ ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿದೆ.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಸದಸ್ಯತ್ವ ಅಭಿಯಾನದಡಿ ಈವರೆಗೆ 50 ಲಕ್ಷ ಸದಸ್ಯರ ನೋಂದಣಿ ಪೂರ್ಣಗೊಳಿಸಿದೆ ಎಂದು ಹೇಳಿದರು.
ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ, ರಾಜ್ಯ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ, ಎಲ್ಲ ಪದಾಧಿಕಾರಿಗಳ ಸಹಕಾರ ಹಾಗೂ ಶ್ರಮದಿಂದ, ಜಿಲ್ಲೆಗಳ ಸಹಕಾರದಲ್ಲಿ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.
2014 ರಲ್ಲಿ ಆನ್ಲೈನ್ ಮೂಲಕ ಸದಸ್ಯತ್ವ ಅಭಿಯಾನ ಆರಂಭವಾಗಿತ್ತು. 2019 ರಲ್ಲಿ ಮಿಸ್ಡ್ ಕಾಲ್ ಮೂಲಕ ಸದಸ್ಯತ್ವ ಮಾಡುತ್ತಿದ್ದು, ಈ ಬಾರಿ ಸದಸ್ಯತ್ವ ಅಭಿಯಾನಕ್ಕೆ ಸಮಿತಿಯನ್ನೂ ರಚಿಸಲಾಗಿದೆ. ಸಂಸದ ಪಿ.ಸಿ.ಮೋಹನ್, ಶಾಸಕರಾದ ಮಹೇಶ್ ಟೆಂಗಿನಕಾಯಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಪ್ರತಾಪಸಿಂಹ ನಾಯಕ್ ಮತ್ತು ನಾನು ತಂಡವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಪ್ರತಿ ಜಿಲ್ಲೆಗೆ ಹಿರಿಯ ನಾಯಕರನ್ನು ಇನ್ ಚಾರ್ಜ್ ಆಗಿ ನೇಮಿಸಲಾಗಿದೆ ಎಂದರು.