ಚಿಕ್ಕೋಡಿ: ಬೊಲೆರೋ ಪಿಕ್ ಅಪ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ತಾಲೂಕಿನ ಬೆಳಕೂಡ ಗೇಟ್ ಬಳಿ ನಡೆದಿದೆ.
ಮೃತರನ್ನು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ರಾಕೇಶ್ ವಾಡೇಕರ (25) ಮತ್ತು ಸೌರಭ (19) ಎಂದು ಗುರುತಿಸಲಾಗಿದೆ. ಆನಂದ ಘಾಟಗೇ (29) ಮತ್ತು ವೀಕಾಸ ಬೀಳಗಿ (19) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಿಪ್ಪಾಣಿಯಿಂದ ಮುಧೋಳ ಕಡೆ ಹೊರಟಿದ್ದ ಕಾರಿಗೆ ಪಿಕ್ ಅಪ್ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಚಿಕ್ಕೋಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.