ಬೆಂಗಳೂರು: ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕರ್ನಾಟಕದ ಮೇಲೂ ಭಾರಿ ಪರಿಣಾಮ ಬೀಳುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಪರಿಣಾಮದಿಂದ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗಲಿದೆ. ಸದ್ಯ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದು ಮುಂದಿನ 2 ದಿನಗಳಲ್ಲಿ ಮತ್ತಷ್ಟು ತೀವ್ರಗೊಂಡು ಹಲವು ಅವಾಂತರ ಸೃಷ್ಟಿಸುವ ಸಾಧ್ಯತೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ಮಳೆ ಬೀಳಲಿದೆ.