ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪದ ತನಿಖೆಯನ್ನು ರಾಜ್ಯ ಲೋಕಾಯುಕ್ತಕ್ಕೆ ವರ್ಗಾಯಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಸೆಪ್ಟೆಂಬರ್ 25, 2019 ರಂದು ಹಿಂದಿನ ಬಿಜೆಪಿ ಸರ್ಕಾರ, ಪ್ರಕರಣದ ವಿಚಾರಣೆ ನಡೆಸುವಂತೆ ಸಿಬಿಐಗೆ ವಹಿಸಿತ್ತು. ಈ ಸಂಬಂಧ ಸಿಬಿಐ 2020 ರ ಅಕ್ಟೋಬರ್ 3 ರಂದು ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿತ್ತು.
ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ನೀಡಿದ್ದ ಒಪ್ಪಿಗೆಯನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದುಕೊಂಡಿದೆ. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಆಗಸ್ಟ್ 29 ರಂದು ವಜಾಗೊಳಿಸಿತ್ತು. ಹೈಕೋರ್ಟ್ ಈ ಅರ್ಜಿಗಳನ್ನು “ನಿರ್ವಹಿಸಲು ಸಾಧ್ಯವಿಲ್ಲ” ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಸುಪ್ರೀಂ ಕೋರ್ಟ್ ಕದ ತಟ್ಟಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ ಆದೇಶದ ವಿರುದ್ಧ ಈಗಾಗಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಸಿಬಿಐ ಸಹ ರಾಜ್ಯ ಸರ್ಕಾರದ ಕ್ರಮವನ್ನು ಸುಪ್ರೀಂನಲ್ಲಿ ಪ್ರಶ್ನಿಸಿದೆ.
ಏನಿದು ಪ್ರಕರಣ?: ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ ಅಂದರೆ ಏಪ್ರಿಲ್ 2013 ರಿಂದ ಏಪ್ರಿಲ್ 2018 ರವರೆಗೆ ಡಿಕೆಶಿ, ತಿಳಿದಿರುವ ಆದಾಯದ ಮೂಲಗಳಿಗೆ ಅನುಗುಣವಾಗಿ 74.93 ಕೋಟಿ ರೂಪಾಯಿ ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಸಿಬಿಐ ಆರೋಪಿದೆ. ಸೆಪ್ಟೆಂಬರ್ 2024ರಲ್ಲಿ ಶಾಸಕ ಯತ್ನಾಳ್, ಹೈಕೋರ್ಟ್ನ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಮಾನ್ಯಮಾಡಿರುವ ಸುಪ್ರೀಂ ಕೋರ್ಟ್, ಕರ್ನಾಟಕ ಸರ್ಕಾರ ಮತ್ತು ಶಿವಕುಮಾರ್ ಅವರಿಂದ ಈ ಬಗ್ಗೆ ಪ್ರತಿಕ್ರಿಯೆ ಕೇಳಿತ್ತು.