ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್‌ಸಿ) ರಾಜ್ಯಕ್ಕೆ ನೀಡಿರುವ ನಿರ್ದೇಶನದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.
ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾವೇರಿ ನದಿ ಪಾತ್ರದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜುಲೈ 14ರಂದು ಸರ್ವಪಕ್ಷಗಳ ಸಭೆ ನಡೆಸಿ ರಾಜ್ಯದ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
“ಈ ಬಾರಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆಗಳ ಹೊರತಾಗಿಯೂ, ಒಳಹರಿವಿನಲ್ಲಿ ಇದುವರೆಗೆ ಶೇ.28 ರಷ್ಟು ಕೊರತೆಯಿದೆ. ಇದನ್ನು ನಾವು ಸಿಡಬ್ಲ್ಯೂಆರ್‌ಸಿ ಮುಂದೆ ಸ್ಪಷ್ಟವಾಗಿ ಹೇಳಿದ್ದೇವೆ. ಅಲ್ಲದೆ, ಜುಲೈ ಅಂತ್ಯದವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ನಾವು ವಿನಂತಿಸಿದ್ದೇವೆ. ಆದರೂ ಜುಲೈ 12ರಿಂದ ಪ್ರತಿದಿನ ಒಂದು ಟಿಎಂಸಿ ನೀರು ಬಿಡುವಂತೆ ಸಿಡಬ್ಲ್ಯುಆರ್‌ಸಿ ಸೂಚಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.