ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್12ಕ್ಕೆ ನಿಗದಿಪಡಿಸಿದೆ.
ಅಲ್ಲದೇ, ನ್ಯಾಯಾಲಯ ಅರ್ಜಿಗಳ ಕುರಿತು ಸಮಗ್ರ ವಾದ ಆಲಿಸಬೇಕಾಗಿದೆ ಎಂದು ಹೇಳಿದೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಕೆ. ಸೋಮಾಶೇಖರ್ ಮತ್ತು ಎಂ. ಉಮೇಶ್ ಅಡಿಗ ಅವರ ವಿಭಾಗೀಯಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಪ್ರಕರಣದಲ್ಲಿ ವಿಚಾರಣೆ ನಡೆಸಬೇಕಾದ ಹಿರಿಯ ವಕೀಲ ಕಪಿಲ್ ಸಿಬಲ್ ಕಾರಣಾಂತರದಿಂದ ವಾದ ಮಂಡನೆಗೆ ಗೈರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೇರೊಂದು ದಿನ ವಿಚಾರಣೆ ನಿಗದಿ ಮಾಡಬೇಕು ಎಂದು ನ್ಯಾಯಪೀಠವನ್ನು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಆ.12 ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಇದೇ ವೇಳೆ, ಬಸನಗೌಡ ಪಾಟೀಲ್ ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ಪ್ರಕರಣ ಸಂಬಂಧ ದಾಖಲೆಗಳ ಲಿಖಿತ ಸಾರಾಂಶವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ನ್ಯಾಯಪೀಠವು, ಸಂವಿಧಾನದ 135ನೇ ವಿಧಿಯ ಉದ್ದೇಶ, ಕೇಂದ್ರೀಯ ವಿಚಕ್ಷಣಾ ಆಯೋಗ ಕಾಯ್ದೆಯ 2003ರ ನೆಲೆಯಲ್ಲಿ ಕೇಂದ್ರೀಯ ವಿಚಕ್ಷಣಾ ಆಯೋಗದ ಪಾತ್ರ ಸೇರಿದಂತೆ ಹಲವು ವಿಚಾರಗಳು ಕುರಿತು ಅರ್ಜಿದಾರರ ಪರ ವಕೀಲರಿಂದ ವಾದ ಆಲಿಸಬೇಕಿದೆ ಎಂದು ಹೇಳಿದೆ. ಈ ಹಿಂದೆ ಅರ್ಜಿ ಸಂಬಂಧ ಮೇ 31ರಂದು ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು. ಆದರೆ ಒಂದಿಷ್ಟು ವಿಚಾರಗಳಿಗೆ ಸ್ಪಷ್ಟನೆ ಕೇಳಬೇಕಾದ ಹಿನ್ನೆಲೆಯಲ್ಲಿ ಮುಂದುವರಿದ ವಿಚಾರಣೆಗೆ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.
ಪ್ರಕರಣದ ಹಿನ್ನೆಲೆ ಏನು..?
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಸಿಬಿಐ ತನಿಖೆಗೆ ಅನುಮತಿ ನೀಡಿ, ಹಿಂದಿನ ಬಿಜೆಪಿ ರಾಜ್ಯ ಸರ್ಕಾರ 2022ರ ಸೆ.25ರಂದು ಆದೇಶ ಹೊರಡಿಸಿತ್ತು. ಅದರ ರದ್ದುಗೊಳಿಸುವಂತೆ ಕೋರಿ ಶಿವಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು 2023ರ ಏ.20ರಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಏಕ ಸದಸ್ಯ ನ್ಯಾಯಪೀಠದ ಆದೇಶ ಮತ್ತು ಸಿಬಿಐ ತನಿಖೆಗೆ ವಿಭಾಗೀಯ ಪೀಠ ತಡೆ ನೀಡಿತ್ತು. ಈ ಮಧ್ಯೆ ಹಾಲಿ ಕಾಂಗ್ರೆಸ್ ಸರ್ಕಾರ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು 2023ರ ನ.28ರಂದು ಹಿಂಪಡೆದಿತ್ತು. ಜೊತೆಗೆ, ತನಿಖೆಯನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿತ್ತು. ಅದನ್ನು ಪ್ರಶ್ನಿಸಿ ಸಿಬಿಐ ಮತ್ತು ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.