ಜಿಲ್ಲಾಧಿಕಾರಿಗಳೆಂದರೆ ಮಹಾರಾಜರಲ್ಲ: ಸಿ.ಎಂ

ಬೆಂಗಳೂರು: ಜಿಲ್ಲಾಧಿಕಾರಿಗಳೆಂದರೆ ಮಹಾರಾಜರಲ್ಲ, ಜನ ಸೇವಕರು. ಮಹಾರಾಜ ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಡಿಸಿಗಳು ಮತ್ತು ಸಿಇಒಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಡಿಸಿ-ಎಸ್’ಪಿ-ಸಿಇಒ ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದು ಹೇಳಿದರು.

ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳು, ಜಿಲ್ಲಾ ವೈದ್ಯಾಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.

40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ.

ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ. ಕರ್ನಾಟಕ ಗುಡ್ ಗೌರ್ನೆನ್ಸ್ ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮಗಳ ಮೇಲಿದೆ. ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

Leave a Reply

Your email address will not be published. Required fields are marked *