ಕೆರೆ ಡೀಸಿಲ್ಟಿಂಗ್ ಹಾಗೂ ಪಾದಚಾರಿ ಮಾರ್ಗ ಕಾಮಗಾರಿಗಳಿಗೆ ವೇಗ ನೀಡಲು ಸೂಚನೆ
ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಕಾಚರಕನಹಳ್ಳಿ ಪ್ರದೇಶದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಾಚರಕನಹಳ್ಳಿ ಕೆರೆಯನ್ನು ವೀಕ್ಷಿಸಿದ ಆಯುಕ್ತರು, ಕೆರೆಯ ಡೀಸಿಲ್ಟಿಂಗ್ (ಹೂಳು ತೆಗೆಯುವ) ಕಾಮಗಾರಿಯನ್ನು ಮೇ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೆರೆಯ ಸಮೀಪದ ಮಾರ್ಗದಲ್ಲಿ ಬಿ-ಸ್ಮೈಲ್ (B-Smile) ವತಿಯಿಂದ ಕೈಗೊಳ್ಳಲಾಗುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲಿಸಿ, ಪಾದಚಾರಿ ಮಾರ್ಗದ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಇದೇ ವೇಳೆ, ಕೆರೆಯ ಒಳಹರಿವಿನ ಭಾಗದ ರಾಜಕಾಲುವೆಯಲ್ಲಿ ನೀರು ನಿಂತಿರುವುದನ್ನು ಗಮನಿಸಿದ ಆಯುಕ್ತರು, ನೀರು ಸರಾಗವಾಗಿ ಹರಿಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಅದನ್ನು ಶೀಘ್ರದಲ್ಲಿ ನಿವಾರಣೆ ಮಾಡಲು ನಿರ್ದೇಶನ ನೀಡಿದರು.
ನಗರದ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದು ಅತ್ಯಂತ ಮುಖ್ಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಆಯುಕ್ತರು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
For More Updates Join our WhatsApp Group :




