ಬೆಂಗಳೂರು: ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಪ್ರತಿ ಹೋಬಳಿಗೂ ಕಡ್ಡಾಯವಾಗಿ ವಸತಿ ಶಾಲೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.
ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬುಧವಾರ ಆಯೋಜಿಸಿದ್ದ ಎಸ್‌ಸಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ, ಹಿಂದಿನ ಬಜೆಟ್‌ನಲ್ಲಿ ಈಗಾಗಲೇ ಅನುಮೋದನೆ ದೊರೆತಿದ್ದು, 20 ಹೋಬಳಿಗಳಲ್ಲಿ ಈ ವರ್ಷ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದರು.
ಹಂತ ಹಂತವಾಗಿ ಎಲ್ಲ ಹೋಬಳಿಗಳಲ್ಲಿ ವಸತಿ ಶಾಲೆಗಳು ಬರಲಿವೆ. ಸರ್ಕಾರಿ ಶಾಲೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು. ಅವರನ್ನು ಪ್ರೋತ್ಸಾಹಿಸಲು ಪ್ರೋತ್ಸಾಹಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ 833, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 113 ವಸತಿ ಶಾಲೆಗಳಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದರು